ದಾವಣಗೆರೆ: ಅನಾರೋಗ್ಯದಿಂದ ಬಳಲುತ್ತಿದ್ದ ದಂಪತಿ, ಇಳಿ ವಯಸ್ಸಿನಲ್ಲಿ ಆರೈಕೆ ಮಾಡುವವರು ಯಾರಿಲ್ಲವೆಂದು ಬೇಸತ್ತು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಷಣ್ಮುಖಪ್ಪ(65), ಇಂದ್ರಮ್ಮ(50) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಷಣ್ಮುಖಪ್ಪ ಮೃತಪಟ್ಟಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದ್ರಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದ ದಂಪತಿಗೆ ಮಕ್ಕಳಿರಲಿಲ್ಲ. ಇಳಿ ವಯಸ್ಸಿನಲ್ಲಿ ನಮ್ಮ ಆರೈಕೆ ಮಾಡುವರು ಯಾರೆಂದು ಬೇಸತ್ತು ಇಬ್ಬರೂ ಕ್ರಿಮಿನಾಶಕ ಸೇವಿಸಿದ್ದಾರೆ.
ವಿಚಾರ ತಿಳಿದ ಅಕ್ಕ-ಪಕ್ಕದ ಮನೆಯವರು ತಕ್ಷಣ ದಂಪತಿಯನ್ನು ಶಿವಮೊಗ್ಗ ಆಸ್ಪತ್ರೆಗೆ ಸೇರಿಸಲು ತೆರಳಿದ್ದಾರೆ. ಈ ವೇಳೆ ಷಣ್ಮುಖಪ್ಪ ಮಾರ್ಗ ಮಧ್ಯೆ ಮೃತಪಟ್ಟಿದ್ದು ಇಂದ್ರಮ್ಮ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದ್ರಮ್ಮ ಪ್ರಾಣ ಬಿಟ್ಟಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.