ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 12 ಜನರು ವಾಂತಿ-ಭೇದಿಯಿಂದ ಬಳಲುತ್ತಿದ್ದು, ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುದ್ದಿ ತಿಳಿದ ತಕ್ಷಣ ತಾಲೂಕು ಆರೋಗ್ಯಾಧಿಕಾರಿ ಡಾ.ಶಿವಕುಮಾರ್ , ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಪ್ಪ, ಗ್ರಾಮೀಣ ಕುಡಿಯುವ ನೀರು ವಿಭಾಗದ ಅಭಿಯಂತರ ಲೋಹಿತ್, ತಾಪಂ ಕಾರ್ಯನಿರ್ವಾಣಾಧಿಕಾರಿ ಬಿ.ಕೆ.ಉತ್ತಮ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಕ ಲೋಕೇಶ್ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಗ್ರಾಮದಲ್ಲಿರುವ ಕುಡಿಯುವ ನೀರು ಸರಬರಾಜಿನ ಓವರ್ ಹೆಡ್ ಟ್ಯಾಂಕ್‌ನ ಸ್ವಚ್ಛಗೊಳಿಸುವ ಪ್ರಕ್ರಿಯೆ ನಡೆದಿದ್ದು, ಗ್ರಾಮದ ಜನರು ಕಾಯಿಸಿ ಆರಿಸಿದ ನೀರನ್ನು ಕುಡಿಯಬೇಕು ಎಂದು ಪ್ರಚಾರ ಪಡಿಸಲಾಗಿದ್ದು ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗ್ರಾಮೀಣ ನೀರು ಸರಬರಾಜು ಅಭಿಯಂತರ ಲೋಹಿತ್ ತಿಳಿಸಿದ್ದಾರೆ.
ವಾಂತಿ-ಭೇದಿಗೆ ಒಳಗಾದವರ ಮಾದರಿಯನ್ನು ದಾವಣಗೆರೆಯ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯರು ತಿಳಿಸಿದರು.



