ದಾವಣಗೆರೆ: ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆಯಲ್ಲಿ ಸಾಕಷ್ಟು ಮೂಲಭೂತ ಸೌಲಭ್ಯಗಳಿದ್ದರೂ, ಬೃಹತ್ ಕೈಗಾರಿಕೆಗಳಿಲ್ಲ. ಈ ಜಿಲ್ಲೆ ರಾಜ್ಯ, ದೇಶದ ಅರ್ಥಿಕ ಬೆಳವಣಿಗೆಗೆ ಮಹತ್ವದ ಪಾತ್ರ ವಹಿಸಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ನಗರದ ತ್ರಿಶೂಲ್ ಕಲಾಭವನದಲ್ಲಿ ಏರ್ಪಡಿಸಿದ್ದ ದಿ ದಾವಣಗೆರೆ – ಹರಿಹರ ಅರ್ಬನ್ ಸಹಕಾರ ಬ್ಯಾಂಕ್ ನಿಯಮಿತದ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದರು. ದಾವಣಗೆರೆ ಈ ಹಿಂದೆ ದೊಡ್ಡ ಕೈಗಾರಿಕೆಗಳಿಗೆ ಪ್ರಸಿದ್ಧಿ ಪಡೆದಿತ್ತು. ಕಾಟನ್ ಮಿಲ್, ರೈಸ್ ಮಿಲ್ ಸೇರಿದಂತೆ ಹಲವು ಕೈಗಾರಿಕೆಗಳು ಕಾರ್ಯಾಚರಿಸುತ್ತಿದ್ದವು. ಇದಲ್ಲದೆ ಅಡುಗೆ ಎಣ್ಣೆ ಉತ್ಪಾದನೆ ಮಾಡುವ ಕೈಗಾರಿಕಗಳು ಸಹ ಇದ್ದವು.ಇದರಿಂದ ದೇಶದ ವಾಣಿಜ್ಯ ಕ್ಷೇತ್ರದಲ್ಲಿ ದೇಶಕ್ಕೆ ದೊಡ್ಡ ಕೊಡುಗೆ ನೀಡಿತ್ತು. ಹೀಗಾಗಿ ಜಿಲ್ಲಿ ವಾಣಿಜ್ಯ, ಶೈಕ್ಷಣಿಕ, ಕೃಷಿ ಕ್ಷೇತ್ರದಲ್ಲಿ ಯಾವುದೇ ಜಿಲ್ಲೆಗಳಿಗೆ ಕಡಿಮೆ ಇಲ್ಲದಂತೆ ಬೆಳೆದಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಬಿ.ಪಿ. ಹರೀಶ್, ಮಾಜಿ ಸಚಿವ ಎಚ್.ಎಸ್. ಶಿವಶಂಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



