ದಾವಣಗೆರೆ; ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಕಟ್ಟಡ ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವಿಚಾರವನ್ನು ʼಎಕ್ಸ್ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ಗಮನಕ್ಕೆ ತಂದಿದ್ದರು. ಕೂಡಲೇ ಸ್ಪಂದಿಸಿದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಈ ಆಸ್ಪತ್ರೆ ಕಟ್ಟಡವು ಸುಮಾರು 50 ವರ್ಷಗಳಷ್ಟು ಹಳೆಯದಾಗಿದ್ದು, ಮೇಲ್ಛಾವಣಿಯಲ್ಲಿನ ಕಾಂಕ್ರೀಟ್ ಬೀಳುತ್ತಿದೆ ಹಾಗೂ ಮಳೆಗಾಲದಲ್ಲಿ ಕಟ್ಟಡ ಸೋರುತ್ತಿರುತ್ತದೆ. ಈ ವಿಚಾರವನ್ನು ಆರೋಗ್ಯ ಇಲಾಖೆಯ ಗಮನಕ್ಕೆ ತರಲಾಗಿದ್ದು, ಕಟ್ಟಡದ ದುರಸ್ತಿಗಾಗಿ ಸುಮಾರು 27 ಕೋಟಿ ರೂ. ಅಂದಾಜು ಮೊತ್ತದ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ. ಮುಂದುವರೆದು, ಆಸ್ಪತ್ರೆ ಕಟ್ಟಡವನ್ನು ತುರ್ತಾಗಿ ರಿಪೇರಿ ಮಾಡಿಸಿಕೊಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಮುಖ್ಯ ಆಯುಕ್ತರಿಗೆ ಮತ್ತೊಮ್ಮೆ ಪತ್ರ ಬರೆಯಲಾಗಿದೆ ಎಂದು ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕರು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.