ದಾವಣಗೆರೆ: ಮುಂಗಾರು ಪೂರ್ವ ಮಳೆ ಜಿಲ್ಲೆಯಲ್ಲಿ ಉತ್ತಮವಾಗಿದ್ದು, ಬಿತ್ತನೆ ಸಿದ್ಧತೆ ನಡೆದಿದೆ. ಕೃಷಿ ಇಲಾಖೆ ಬಿತ್ತನೆ, ಬೀಜ, ಗೊಬ್ಬರಕ್ಕೆ ಯಾವುದೇ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಜಿಲ್ಲಾಡಳಿತಕ್ಕೆ ಸೂಚಿಸಿದರು.
ಜಿಲ್ಲಾಡಳಿತ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿ, ಮುಂಗಾರು ಪೂರ್ವ ಮಳೆ ಹೆಚ್ಚಾಗಿದೆ. ರೈತರಿಗೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಬಿತ್ತನೆ ಬೀಜ, ಗೊಬ್ಬರಕ್ಕೆ ಯಾವುದೇ ಸಮಸ್ಯೆಯಾಗದಂತೆ ನಿಗಾವಹಿಸಿ ಎಂದರು.
ಯುದೇ ಪ್ರಾಣ ಹಾನಿ, ಆಸ್ತಿ ಹಾನಿಯಾದರೆ ಸೂಕ್ತ ಕ್ರಮ ಕೈಗೊಂಡು, ಸರ್ಕಾರಕ್ಕೆ ಸಲ್ಲಿಸಬೇಕು. ಮಳೆಯಿಂದಾಗಿ ಆಗುವ ಅಪಾಯ, ಅನಾಹುತಗಳ ಬಗ್ಗೆ ಜಾಗೃತರಾಗಿರಬೇಕು. ಗುಡುಗು-ಸಿಡಿಲಿನಿಂದ ಉಂಟಾಗುವ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಿ. ಗುಡುಗು-ಸಿಡಿಲಿನ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಮಳೆ, ಗಾಳಿಯಿಂದ ಮರಗಳು, ವಿದ್ಯುತ್ ಕಂಬಗಳು ಬಿದ್ದರೆ, ತಕ್ಷಣ ತೆರವುಗೊಳಿಸಬೇಕು. ವಿದ್ಯುತ್ ಸಮಸ್ಯೆ ಉಂಟಾಗದಂತೆ ಕ್ರಮಕೈಗೊಳ್ಳಿ ಎಂದರು.
ಮಳೆ, ಕೊಳಚೆ ನೀರು ಕುಡಿಯುವ ನೀರಿನ ಪೈಪ್‌ಲೈನ್ ಸೇರದಂತೆ ಕ್ರಮ ಕೈಗೊಳ್ಳಬೇಕು. ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆಯು ಸಮುದಾಯ ಆರೋಗ್ಯ ಕೇಂದ್ರಗಳ ಮೂಲಕ ಜನರಿಗೆ ಸೂಕ್ತ ಮುನ್ನೆಚ್ಚರಿಕೆ ಮೂಡಿಸಲಿ ಎಂದರು.ಜಿಲ್ಲಾಡಳಿತ, ತಾಲೂಕು ಆಡಳಿತ, ಮಹಾ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಪಂಗಳ ತಗ್ಗು ಪ್ರದೇಶಕ್ಕೆ ನೀರು ನುಗ್ಗದಂತೆ ಕ್ರಮ ಕೈಗೊಳ್ಳಬೇಕು ಎಂದರು.
ದಾವಣಗೆರೆ, ಹರಿಹರ, ಹೊನ್ನಾಳಿ, ಚನ್ನಗಿರಿ ಇತರೆ ಭಾಗಗಳಲ್ಲಿ ಮುಂದಾರು ಪೂರ್ವ ಮಳೆಗೆ ಭತ್ತ ಬೆಳೆಗಳಿಗೆ ತೊಂದರೆಯಾಗುತ್ತಿದೆ. ರೈತರ ನೆರವಿಗೆ ಕೃಷಿ ಇಲಾಖೆಗೆ ಮುಂದಾಗಬೇಕು. ಕಳೆದೊಂದು ವಾರದಿಂದ ಜಿಲ್ಲಾದ್ಯಂತ ಉತ್ತಮ ಮಳೆಯಾಗುತ್ತಿರುವ ಬೆನ್ನಲ್ಲೇ ರೈತರು ಭೂಮಿ ಹದ ಮಾಡಿಕೊಂಡು, ಮೆಕ್ಕೆಜೋಳ ಬಿತ್ತನೆ ಕಾರ್ಯ ನಡೆಯುತ್ತಿದೆ. ಬಿತ್ತನೆ ಬೀಜ ಕೊರತೆ ಆಗದಂತೆ ಕ್ರಮಕೈಗೊಳ್ಳಬೇಕು ಎಂದರು.



