ಬೆಂಗಳೂರು: ಎಸ್ಪಿ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ನೀಡಿದ ಹೈಕೋರ್ಟ್, ತನಿಖೆಗೆ ಸಹಕರಿಸುವಂತೆ ಹರೀಶ್ ಗೆ ಸೂಚಿಸಿದೆ.
ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಶಾಸಕ ಬಿ.ಪಿ. ಹರೀಶ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ನೀಡಿದೆ.
ಪ್ರತಿವಾದಿಗಳಾದ ಕೆಟಿಜೆ ನಗರ ಪೊಲೀಸರು ಹಾಗೂ ದೂರುದಾರರಾದ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಬಿ.ಪಿ. ಹರೀಶ್ ಪರ ವಕೀಲರಾದ ಪಿ. ವೆಂಕಟೇಶ್ ದಳವಾಯಿ ವಾದ ಮಂಡಿಸಿದ್ದರು.
ಅರ್ಜಿದಾರದ ಎಸ್ಪಿಗೆ ಧಕ್ಕೆ ತರುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡಿಲ್ಲ. ಜಿಲ್ಲಾ ಸಚಿವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಉನ್ನತ ಮಟ್ಟದ ಅಧಿಕಾರಿಗಳಿಗೆ ಗೌರವ ನೀಡದೆ, ಮನಬಂದಂತೆ ನಡೆಸಿಕೊಳ್ಳುತ್ತಾರೆ ಎಂಬ ದೃಷ್ಠಿಯಲ್ಲಿ ಹೇಳಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿ ಈಗಾಗಲೇ ಪತ್ರಿಕಾ ಪ್ರಕಟಣೆಯನ್ನೂ ಹೊರಡಿಸಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಪೊಲೀಸ್ ವರಿಷ್ಠಾಧಿಕಾರಿ ಹೆಸರು ಉಲ್ಲೇಖಿಸದೇ, ವ್ಯವಸ್ಥೆಯನ್ನು ಟೀಕಿಸುವ ಧಾವಂತದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ. ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ಅರ್ಜಿದಾರರ ವಿರುದ್ಧದ ಎಫ್ಐಆರ್ ರದ್ದುಪಡಿಸಬೇಕು ಎಂದು ಮನವಿ ಮಾಡಿದರು.
ಶಾಸಕ ಹರೀಶ್ ಹೇಳಿದ್ದೇನು..?
ಸೆಪ್ಟೆಂಬರ್ 2ರಂದು ಸುದ್ದಿಗೋಷ್ಠಿ ನಡೆಸಿದ್ದ ಹರಿಹರ ಶಾಸಕ ಬಿ.ಪಿ. ಹರೀಶ್, ಜಿಲ್ಲಾ ಎಸ್ಪಿ ಅವರು ಶಾಮನೂರು ಮನೆಯ ಪೊಮೆರೇಯನ್ ನಾಯಿಯಂತೆ ವರ್ತಿಸುತ್ತಾರೆ. ಎಸ್ಪಿಗೆ ಅಧಿಕಾರದಲ್ಲಿರುವವರು ಮಾತ್ರ ಮುಖ್ಯವಾಗಿ ಕಾಣುತ್ತಾರೆ ಎನ್ನಿಸುತ್ತದೆ. ಎಲ್ಲ ಜನಪ್ರತಿನಿಧಿಗಳನ್ನೂ ಸಮಾನವಾಗಿ ಕಾಣುವ ದೃಷ್ಟಿಕೋನ ಇಲ್ಲ ಎಂದಿದ್ದರು.
ಮಾಧ್ಯಮದ ಮುಂದೆ ಮಾನಹಾನಿಕರವಾದ ಮಾತುಗಳನ್ನಾಡಿದ್ದಾರೆ. ಮಾತನಾಡಿದ ವಿಡಿಯೋ ನೋಡಿ ಮನಸಿಗೆ ಆಘಾತವಾಗಿದೆ. ಆದ್ದರಿಂದ, ಶಾಸಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೂರಿನಲ್ಲಿ ಉಲ್ಲೇಖಿಸಿದ್ದರು.
ದೂರು ಆಧರಿಸಿ, ಶಾಸಕ ಬಿ.ಪಿ. ಹರೀಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 79 (ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವುದು) ಹಾಗೂ 132 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಎಫ್ಐಆರ್ ರದ್ದುಪಡಿಸುವಂತೆ ಶಾಸಕರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.



