ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ102 ಜನ ವಿದೇಶ ಪ್ರವಾಸ ಕೈಗೊಂಡವರಿದ್ದು, ಅವರಲ್ಲಿ 6 ಜನರನ್ನು ನಿಗಾ ವಹಿಸಲಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಯಾರೊಬ್ಬರಲ್ಲೂ ಸೋಂಕು ಕಂಡುಬಂದಿಲ್ಲ. ಎಲ್ಲ ವರದಿಗಳು ನೆಗೆಟಿವ್ ಬಂದಿವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾತ್ರಿಯಿಂದ ಬೆಳಿಗ್ಗೆ ವರೆಗೆ ಮನೆ ಬಿಟ್ಟು ಹೊರ ಬರಬೇಡಿ ಎಂದು ಡಿಸಿ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡಿರುವುದನ್ನು ಗಮನಿಸಿದ್ದೇನೆ. ಇಂತಹ ಗಾಳಿಸುದ್ದಿ, ಕಡಿಗೇಡಿಗಳು ಇಂತಹ ಸುಳ್ಳು ಸುದ್ದಿ ಹರಡಿಸುತ್ತಿದ್ದು, ಇಂತವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ವ್ಯಾಪಾರಸ್ಥರು ಸಹಕರಿಸಿ
ಹೊಟೇಲ್, ಬೀದಿ ಬದಿ ವ್ಯಾಪಾರಸ್ಥರು ಸೇರಿದಂತೆ ಜಿಲ್ಲೆಯಲ್ಲಿ ಕೋಳಿ ಮಾಂಸ ಮಾರುವ ಹಾಗೂ ಮೊಟ್ಟೆ ಅಂಗಡಿಗಳನ್ನು ಮುಚ್ಚಿಸಲಾಗಿದ್ದು, ಈ ವ್ಯಾಪಾರಸ್ಥರಿಗೆ ಸಾಕಷ್ಟು ನಷ್ಟವಾಗಿದೆ. ಸಾರ್ವಜನಿಕರ ಆರೋಗ್ಯದ ಮೇಲಿನ ದುಷ್ಪರಿಣಾಮದ ಕುರಿತು ಅವಲೋಕಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಇದೇ ರೀತಿ ಕೊರೊನಾ ಸೋಂಕು ನಿರ್ವಹಣೆಯಲ್ಲಿ ಅಂಗಡಿ ಮಾಲೀಕರು ಸಹ ಸಹಕರಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಕೊರೊನಾ ವೈರಸ್ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಜನಸಂದಣಿ ಪ್ರದೇಶಗಳಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜವಳಿ ಅಂಗಡಿ ಮಾಲೀಕರು ಸೂಕ್ತ ಕಟ್ಟುನಿಟ್ಟಿನ ಕ್ರಮ ಅನುಸರಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣಾಧಿಕಾರಿ ಡಾ.ರಾಘವೇಂದ್ರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್, ನಗರಾಭಿವೃದ್ದ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಉಪಸ್ಥಿತರಿದ್ದರು.



