ಡಿವಿಜಿ ಸುದ್ದಿ , ದಾವಣಗೆರೆ: ನಗರದ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನಲ್ಲಿದ್ದ ವ್ಯಕ್ತಿಯೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ದಾವಣಗೆರೆಯ ಆನೆಕೊಂಡ ನಿವಾಸಿ ಕಂಟೈನ್ಮೆಂಟ್ ಏರಿಯಾದಲ್ಲಿ ವಾಸಿಸುತ್ತಿದ್ದರು. ಇವರಿಗೆ ಕೆಮ್ಮು ಜ್ವರದಂತಹ ಲಘು ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ದಾವಣಗೆರೆಯ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ಮೇ 20ರಂದು ಗಂಟಲು ದ್ರವವನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವರದಿ ಬರುವ ಮುನ್ನವೇ ಇವತ್ತು ಬೆಳಗ್ಗೆ 7.30ರ ಸುಮಾರಿಗೆ ಆಸ್ಪತ್ರೆಯ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಈ ಸಂಬಂಧ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆತ ಕೊರೊನಾ ಬಂದರೆ ನನ್ನ ಕ್ವಾರಂಟೈನ್ ಮಾಡುತ್ತಾರೆ ಎಂಬ ಭಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಈ ರೀತಿ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.