ಡಿವಿಜಿ ಸುದ್ದಿ, ಬೆಂಗಳೂರು: ಕೋವಿಡ್-19 ಹರಡುವಿಕೆ ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವಿನೆ ಮತ್ತು ಉಗುಳುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ತಂಬಾಕು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದಿಂದ ಕೋವಿಡ್-19 ಮತ್ತು ಇತರ ಸಾಂಕ್ರಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೋವಿಡ್-19 ಹೆಚ್ಚುತ್ತಿದ್ದು, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಸಿಎಂಆರ್ ಕೂಡಾ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾಂಕ್ರಮಿಕ ರೋಗ ಹೆಚ್ಚಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದೆ. ಹೀಗಾಗಿ ಸಾರ್ವಜನಿಕ ಸ್ಥಳದಲ್ಲಿ ಉಗುಳುವುದನ್ನು ನಿಷೇಧಿಸಿದೆ.
ಈ ಬಗ್ಗೆ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ ಸರ್ಕಾರ, ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಉಗಿಯುವುದನ್ನು ನಿಷೇಧಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿತ್ತು. ಈ ನಿಯಮ ಉಲ್ಲಂಘಿಸಿದರೆ ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಅಧಿಕಾರಿಯ ಆದೇಶ ಉಲ್ಲಂಘನೆ), 268, 269, 279 (ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು) ಅಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.



