ಡಿವಿಜಿ ಸುದ್ದಿ, ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿಗೆ ಬೆಳಗಾವಿ ಜಿಲ್ಲೆ, ಆಹಾರ ಸಚಿವ ಕೆ.ಗೋಪಾಲಯ್ಯ ಅವರನ್ನು ಹಾಸನ ಜಿಲ್ಲೆ ಉಸ್ತುವಾರಿ ಸಚಿವರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಈ ಹಿಂದೆ ಬೆಳಗಾವಿ ಜಿಲ್ಲೆ ಉಸ್ತುವಾರಿಯನ್ನು ಜಗದೀಶ ಶೆಟ್ಟರ್ ಹಾಗೂ ಹಾಸನ ಜಿಲ್ಲಾ ಉಸ್ತುವಾರಿಯನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ನೀಡಲಾಗಿತ್ತು. ರಮೇಶ್ ಜಾರಕಿಹೊಳಿ ಬಿಜೆಪಿ ಸೇರುವುದಕ್ಕೆ ಮೊದಲೇ ಜಲಸಂಪನ್ಮೂಲ ಖಾತೆ ಮತ್ತು ಜಿಲ್ಲಾ ಉಸ್ತುವಾರಿಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗುತ್ತಿತ್ತು. ಇದೀಗ ಅವರ ಆಸೆಯಂತೆ ಬೆಳಗಾವಿ ಜಿಲ್ಲಾ ಉಸ್ತುವಾರಿಯೂ ಸಿಕ್ಕಿದೆ.
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಆಸೆ ಇತ್ತು. ಆದರೆ, ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಾರಕಿಹೊಳಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.



