ಡಿವಿಜಿ ಸುದ್ದಿ, ಬೆಂಗಳೂರು: ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಅಶೋಕ ಗಸ್ತಿ ಮತ್ತು ಈರಣ್ಣ ಕಡಾಡಿ ಅವರು ಕರ್ನಾಟಕ ವಿಧಾನ ಸಭಾ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಹಿರಿಯ ಶಾಸಕ ಉಮೇಶ ಕತ್ತಿ, ರಾಜ್ಯಸಭೆ ಟಿಕೆಟ್ ಆಕಾಂಕ್ಷಿ ರಮೇಶ ಕತ್ತಿ ಉಪಸ್ಥಿತರಿದ್ದರು.
ಬೆಳಗಾವಿ ಜಿಲ್ಲೆ ಗೋಕಾಕ ತಾಲ್ಲೂಕಿನ ಕಲ್ಲೋಳಿಯವರಾದ ಈರಣ್ಣಾ ಅವರು 22ನೇ ವಯಸ್ಸಿನಿಂದಲೇ ಸಂಘ ಪರಿವಾರ ಹಾಗೂ ಬಿಜೆಪಿ ಜೊತೆ ಗುರುತಿಸಿ ಕೊಂಡಿದ್ದರು. ಈ ಮೂಲಕ ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು. ನಂತರ ಅರಭಾವಿ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ, ಮಂಡಳ ಅಧ್ಯಕ್ಷ, ಜಿಲ್ಲಾ ಕಾರ್ಯದರ್ಶಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ರಾಜ್ಯ ಸಮಿತಿ ಕಾರ್ಯದರ್ಶಿ ಹಾಗೂ ಪ್ರಸ್ತುತ ಪಕ್ಷದ ಬೆಳಗಾವಿ ವಿಭಾಗದ ಉಸ್ತುವಾರಿಯಾಗಿದ್ದಾರೆ. 2008ರಲ್ಲಿ ಎನ್‌ಜಿಇಎಫ್ ಅಧ್ಯಕ್ಷರಾಗಿದ್ದರು. 2010ರಲ್ಲಿ ಬೆಳಗಾವಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದರು.
ರಾಯಚೂರಲ್ಲಿ ವಕೀಲರಾಗಿದ್ದ ಅಶೋಕ ಗಸ್ತಿ ಅವರು 1989ರಲ್ಲಿ ಬಿಜೆಪಿ ಜೊತೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಯುವ ಮೋರ್ಚಾ ಜಿಲ್ಲಾ ಘಟಕ ಅಧ್ಯಕ್ಷ, 2009ರಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ, ನಂತರ ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.