ಡಿವಿಜಿಸುದ್ದಿ.ಕಾಂ, ದಾವಣಗೆರೆ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ ಅರಿವು ಅಗತ್ಯವಿದ್ದು, ಈ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸರ್ಕಾರವೇ ಮಾಹಿತಿ ತಂತ್ರಜ್ಞಾನ ಕುರಿತು ರಸ ಪ್ರಶ್ನೆ ಕಾರ್ಯಕ್ರಮ ಆಯೋಜಿಸಿದೆ. ಗ್ರಾಮೀಣ ಪ್ರದೇಶದ ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಿಇಎ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಿ.ಎಸ್ ರವಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಬಿಇಎ ಪ್ರೌಢಶಾಲೆ ಸಹಯೋಗದೊಂದಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಮಾಹಿತಿ ತಂತ್ರಜ್ಞಾನ ರಸ ಪ್ರಶ್ನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಡಿದ ಅವರು, ಮಾಹಿತಿ ತಂತ್ರಜ್ಞಾನ ಕ್ಷೇತ್ರ ಹಿಂದೆ ಹೇಗಿತ್ತು. ಈಗ ಹೇಗೆ ಇದೆ ಮತ್ತು ಮುಂದೆ ಹೇಗೆ ಬದಲಾವಣೆ ಆಗಲಿದೆ ಎಂಬುದನ್ನು ಶಾಲಾ ಮಕ್ಕಳಿಗೆ ತಿಳಿಸಿಕೊಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸೌಲಭ್ಯದ ಕೊರತೆಯಿಂದ ಮಾಹಿತಿ ತಂತ್ರಜ್ಞಾನ ಬಗ್ಗೆ ಅಷ್ಟೊಂದು ಅರಿವು ಇರುವುದಿಲ್ಲ. ಹೀಗಾಗಿ ಮಕ್ಕಳಲ್ಲಿ ಮಾಹಿತಿ ತಂತ್ರಜ್ಞಾನದ ಬಗ್ಗೆ ಕೌತುಕ ಮತ್ತು ಆಸಕ್ತಿಯನ್ನು ಹುಟ್ಟಿಸುವ ಸಲುವಾಗಿ ಎಲ್ಲಾ ಶಾಲಾ ಮಟ್ಟ, ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟ, ವಿಭಾಗ ಮಟ್ಟ, ರಾಜ್ಯ ಮಟ್ಟ ಹಾಗೂ ರಾಷ್ಟ್ರಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ಈ ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಗ್ರಾಮೀಣ ಪ್ರದೇಶದ ವಿದಾರ್ಥಿಗಳು ಭಾಗಿಯಾಗಿದ್ದರು. ಇದರಲ್ಲಿ ೫೦ ಮಕ್ಕಳನ್ನು ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಡಯಟ್‌ನ ಅಯೂಬ್ ಸೊರಬ್ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಘಟಕರಾದ ವಸಂತಕುಮಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



