ಚಿಕ್ಕಮಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾರಿಗೆ ಹಗ್ಗ ಕಟ್ಟಿ ಎಳೆದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ತಾಲೂಕು ಕಚೇರಿಯಿಂದ ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಕಾರಿಗೆ ಹಗ್ಗ ಕಟ್ಟಿ ಎಳೆದುಕೊಂಡು ಬಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯುದ್ದಕ್ಕೂ ಬೈಕನ್ನು ತಳ್ಳಿಕೊಂಡೇ ಸಾಗಿದರು. ಜೊತೆಗೆ ಗ್ಯಾಸ್ ಸಿಲಿಂಡರ್ ಒಂದನ್ನು ಬೈಕಿನ ಮೇಲೆ ಇಟ್ಟುಕೊಂಡು ಮೆರವಣಿಗೆ ಸಾಗಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಕೇಂದ್ರ ಸರ್ಕಾರ ಉದ್ಯಮಿಗಳ ಪರ ನಿಂತಿದೆ. ಸರ್ಕಾರದ ಬಿಎಸ್‍ಎನ್‍ಎಲ್, ಪೆಟ್ರೋಲ್, ಡಿಸೇಲ್, ಗ್ಯಾಸ್, ರಸ್ತೆ ಸೇರಿದಂತೆ ಪ್ರತಿಯೊಂದರಲ್ಲೂ ಅವ್ಯವಹಾರ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಬಡವರ ಪರ ಇಲ್ಲ ಕಿಡಿಕಾರಿದರು.



