ತುಮಕೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಿಸಲು ರಚನೆ ಮಾಡಿದ ಏಳನೇ ವೇತನ ಆಯೋಗವು ನವೆಂಬರ್ ತಿಂಗಳು ಮುಗಿಯುವದರ ಒಳಗೆ ವರದಿ ಸಲ್ಲಿಸಲಿದ್ದು, ವರದಿ ಬಂದ ಕೂಡಲೇ ಜಾರಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಯೋಗದ ವರದಿ ಬಂದ ನಂತರ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಭರವಸೆ ನೀಡಿದ್ದಾರೆ. ನವೆಂಬರ್ ಒಳಗೆ ವರದಿ ಸಲ್ಲಿಸುವಂತೆ ವೇತನ ಆಯೋಗಕ್ಕೆ ಸೂಚಿಸಲಾಗಿದೆ. ನೌಕರರು ಆತಂಕಪಡುವ ಅಗತ್ಯವಿಲ್ಲ. ಇನ್ನೂ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಲಾಗುವುದು. ಈ ಬಗ್ಗೆ ವರದಿ ನೀಡಲು ಸಮಿತಿ ರಚಿಸಲಾಗಿದೆ ಎಂದರು.
ಎಲ್ಲಾ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರಿಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ’ ಯೋಜನೆ ಜಾರಿಯಾಗಲಿದೆ. ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರರು ಇದ್ದು, ಇನ್ನೂ 2.50 ಲಕ್ಷ ಹುದ್ದೆಗಳು ಖಾಲಿ ಉಳಿದಿವೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಏಳನೇ ವೇತನ ಆಯೋಗದ ವರದಿ ಬಂದ ತಕ್ಷಣ ಜಾರಿ ಮಾಡಬೇಕು. ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಬೇಕು. ತುಟ್ಟಿ ಭತ್ಯೆಯನ್ನು ಶೇ 23ರಷ್ಟು ಹೆಚ್ಚಳ ಮಾಡಬೇಕು’ ಎಂದು ಒತ್ತಾಯಿಸಿದರು.



