ಡಿವಿಜಿ ಸುದ್ದಿ, ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. 10 ಲಕ್ಷ ನಗದು ಹಾಗೂ ಅಪಾರ ಪ್ರಮಾಣದ ಆಸ್ತಿ ದಾಖಲೆ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಮನೆ, ಕಚೇರಿ ಸೇರಿದಂತೆ 6 ಕಡೆ ದಾಳಿ ನಡೆಸಲಾಗಿದೆ . ಈ ಹಿಂದೆ ಬಿಡಿಎನಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಡಾ. ಬಿ. ಸುಧಾ ಅವರ ವಿರುದ್ಧ ಎಸಿಬಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಕುರಿತು ದೂರು ದಾಖಲಾಗಿತ್ತು.
ಪ್ರಸ್ತುತ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನದ ಆಡಳಿತ ಅಧಿಕಾರಿ ಆಗಿರುವ ಬಿ. ಸುಧಾ ಅವರ ಬೆಂಗಳೂರಿನ ಕೊಡಿಗೇಹಳ್ಳಿ ನಿವಾಸ, ಯಲಹಂಕದಲ್ಲಿ ಒಂದು ಫ್ಲ್ಯಾಟ್, ಬ್ಯಾಟರಾಯನಪುರ ಹಾಗೂ ಬಿಇಎಂಎಲ್ ಮನೆ ಹಾಗೂ ಉಡುಪಿ ಜಿಲ್ಲೆಯ ಹೆಬ್ರಿ ಮನೆಯ ಮೇಲೂ ದಾಳಿ ನಡೆಸಲಾಗಿದೆ. ಸದ್ಯ ಎಸಿಬಿ ಅಧಿಕಾರಿಗಳು ದಾಖಲಾತಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಳಗ್ಗೆ 6.30 ರಿಂದ ಶೋಧ ಕಾರ್ಯ ನಡೆಯುತ್ತಿದೆ.



