ಡಿವಿಜಿ ಸುದ್ದಿ, ಚಿತ್ರದುರ್ಗ: ರಾಜ್ಯದಲ್ಲಿ ವಿತರಿಸಲಾಗುತ್ತಿರುವ ಪಡಿತರ ವ್ಯವಸ್ಥೆಗೆ ಮೆಕ್ಕೆಜೋಳ ಒಳಪಡುವುದಿಲ್ಲ. ಹೀಗಾಗಿ ಸರ್ಕಾರ ಖರೀದಿ ಕೇಂದ್ರ ತೆರೆಯಲು ಸಾಧ್ಯವಾಗುತ್ತಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.
ಮುರುಘಾ ಮಠದಲ್ಲಿ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದಲ್ಲಿ ಕೃಷಿ ಮತ್ತು ಕೈಗಾರಿಕಾ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಸೇರಿ ರಾಜ್ಯದ ಬೇರೆ ಬೇರೆ ಜಿಲ್ಲೆಯಲ್ಲಿ ಮೆಕ್ಕೆಜೋಳ ಹೆಚ್ಚಾಗಿ ಬೆಳೆಯಲಾಗಿದೆ. ಸರ್ಕಾರ ಖರೀದಿ ಕೇಂದ್ರ ತೆರೆಯುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಭತ್ತ ಖರೀದಿ ಕೇಂದ್ರ ಡಿಸೆಂಬರ್ ನಲ್ಲಿ ತೆರೆಯಲಾಗುತ್ತದೆ. ರಾಗಿ, ತೊಗರಿ ಖರೀದಿ ಕೇಂದ್ರ ಕೂಡ ಪರಿಶೀಲನೆ ನಡೆಯುತ್ತಿದೆ ಎಂದರು.
ಇನ್ನು ರಾಜ್ಯದಲ್ಲಿ ಭಾರೀ ಮಳೆಯಿಂದ ಅತಿವೃಷ್ಟಿಯಾದ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. ಪರಿಹಾರಕ್ಕೆ ಜಿಲ್ಲಾಧಿಕಾರಿ ಖಾತೆಯಲ್ಲಿ ಅಗತ್ಯಕ್ಕೆ ಬೇಕಾದಷ್ಟು ಹಣವಿದ್ದು, ನೆರೆಯನ್ನು ಸರ್ಕಾರ ಸಮರ್ಥವಾಗಿ ನಿರ್ವಹಿಸಲಿದೆ ಎಂದು ತಿಳಿಸಿದರು.



