ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ ಕತ್ತಿ ಹಾಗೂ ಉಪಾಧ್ಯಕ್ಷ ಸುಭಾಷ ಢವಳೇಶ್ವರ ಅವರು ಆಯ್ಕೆಯಾಗಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
ಜಿಲ್ಲೆಯ ಬಿಜೆಪಿ ಮುಖಂಡರ ಭಿನ್ನಮತ ಹೊರತಾಗಿಯೂ ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಒಮ್ಮತದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ನಿಚ್ಚಳವಾಗಿದೆ. ಪ್ರವಾಸಿ ಮಂದಿರದಲ್ಲಿ ಶನಿವಾರ ಬೆಳಿಗ್ಗೆಯಿಂದ ಅಂತಿಮ ಸುತ್ತಿನ ಸಭೆ ನಡೆಸಿದ ಬಿಜೆಪಿ ಮುಖಂಡರು, ನಿರ್ದೇಶಕರ ಅಭಿಪ್ರಾಯಗಳನ್ನು ಆಲಿಸಿ ಅವಿರೋಧ ಆಯ್ಕೆಗೆ ನಿರ್ಧಾರ ಮಾಡಿರುವುದಾಗಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು.
ಈ ಬಗ್ಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಪ್ರತಿಷ್ಠಿತ ಡಿಸಿಸಿ ಬ್ಯಾಂಕಿನ ಶತಮಾನೋತ್ಸವ ಆಚರಣೆ ಈ ವರ್ಷ ಬರಲಿದೆ. ಈ ಸಲ ಚುನಾವಣೆ ಬೇಡ. ಎಲ್ಲರೂ ಸಮಾಲೋಚನೆ ನಡೆಸಿ ಒಮ್ಮತದ ನಿರ್ಣಯಕ್ಕೆ ಬರಬೇಕು ಎಂದು ವರಿಷ್ಠರು ಸೂಚಿಸಿದ್ದು, ಹಾಲಿ 14 ನಿರ್ದೇಶಕರನ್ನು ಮುಂದುವರಿಸುವಂತೆಯೂ ಸಂದೇಶ ನೀಡಿದ್ದರು ಎಂದು ಹೇಳಿದರು.