ಬೆಂಗಳೂರು: ಕೊರೊನಾ ಸಂಕಷ್ಟ ಸಮಯದಲ್ಲಿ ಯಾರಾದರೂ ರೆಮ್ ಡಿಸಿವಿರ್ ಲಸಿಕೆಯನ್ನು ಅಕ್ರಮವಾಗಿ ಮಾರಾಟ ಮಾಡುವುದು ಗಮನಕ್ಕೆ ಬಂದರೆ, ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶಿವಾಜಿನಗರದ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ 18 ವರ್ಷದ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆಗೆ ದರ ನಿಗದಿ ಪಡಿಸಲಾಗಿದೆ. ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಬೆಲೆ ತೆಗೆದುಕೊಳ್ಳುವಂತಿಲ್ಲ. ಒಂದು ವೇಳೆ ಯಾರೇ ಹೆಚ್ಚು ಬೆಲೆಗೆ ಮಾರಾಟ ಮಾಡಿದ್ದು, ಗಮನಕ್ಕೆಬಂದ್ರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
3ಲಕ್ಷ ಲಸಿಕೆ ಕೇಂದ್ರದಿಂದ ಲಭ್ಯವಾಗಿದೆ.ನಮ್ಮ ಬಳಿಯೂ 1ಲಕ್ಷ ಲಸಿಕೆ ಇದೆ. 2ಕೋಟಿ ಲಸಿಕೆ ಖರೀದಿಗೆ ಈಗಾಗಲೇ ಆರ್ಡರ್ ನೀಡಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಉಚಿತವಾಗಿ ಲಸಿಕೆ ನೀಡಲಾಗುವುದು. 2- 3 ದಿನಗಳಲ್ಲಿ ಎಲ್ಲಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗವುದು. 4 ಲಕ್ಷ ಲಸಿಕೆ ಇದೆ, ಮುಂದೆ ಸ್ಟಾಕ್ ಬರಲಿದೆ.ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.
ಕೇಂದ್ರ ಸರ್ಕಾರ ಸಾಕಷ್ಟು ಸಹಕಾರ ನೀಡಿದೆ. ಈ ವಿಚಾರದಲ್ಲಿ ಪ್ರಧಾನಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಪ್ರತಿಯೊಬ್ಬರೂ ಸಾಮಾಜಿಕ ಅಂತರ, ಮಾಸ್ಕ್ ಧರಿಸಬೇಕು.18ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ಕೆ ಸಾಂಕೇತಿಕ ಚಾಲನೆ ನೀಡಿದ್ದೇವೆ.ಕೋವಿಡ್ ವಿರುದ್ಧದ ಸಮರದಲ್ಲಿ ಮಹತ್ವದ ದಿನ.ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.ರಾಜ್ಯ ಸರ್ಕಾರ ಉಚಿತವಾಗಿ ಲಸಿಕೆ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳು ಬೆಡ್ ನೀಡದ ಆರೋಪಕ್ಕೆ ಪ್ರತಿಕ್ರಿಯಿಸಿ, ಸಂಜೆ ಸಭೆ ನಡೆಸಿ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಿದ್ದೇವೆ ಎಂದರು. ಈ ವೇಳೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಯಿತು.



