ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಕಾರ್ಯದಲ್ಲಿ ಜಿಲ್ಲೆಯಲ್ಲಿ ವೈದ್ಯರು, ಸಿಬ್ಬಂದಿಯಾದಿಯಾಗಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಪ್ರತಿಯೊಬ್ಬರೂ ಹಗಲು ರಾತ್ರಿ ಉತ್ತಮವಾಗಿ ಸೇವೆ ಕಾರಣ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ರಾಜ್ಯದಲ್ಲಿಯೂ ಸೋಂಕು ಪ್ರಮಾಣ ಇಳಿಮುಖವಾಗಿದೆ. ಸದ್ಯ ಜಿಲ್ಲೆಯಲ್ಲಿ ಪಾಸಿಟಿವ್ ಕಂಡುಬರುವ ಪ್ರಮಾಣ ಶೇ. 5 ಕ್ಕಿಂತ ಕಡಿಮೆ ಇದೆ. ಈ ಪ್ರಮಾಣ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಶೇ. 2.5 ಕ್ಕಿಂತ ಕಡಿಮೆ ಆಗಿರುವುದು ಸಮಾಧಾನಕರ ಸಂಗತಿಯಾಗಿದೆ.
ಸದ್ಯ ಜಿಲ್ಲೆಯಲ್ಲಿ ನಿತ್ಯ ಕನಿಷ್ಟ 2500 ಮಾದರಿಗಳ ಪರೀಕ್ಷೆ ನಡೆಸುವುದನ್ನು ಮುಂದುವರೆಸಲಾಗಿದೆ. ಮುಂಬರುವ ಚಳಿಗಾಲದಲ್ಲಿ ಕೋವಿಡ್ ಪ್ರಕರಣ ಹೆಚ್ಚುವ ಸಂಭವವಿದೆ ಎಂಬುದಾಗಿ ತಜ್ಞರು ಅಭಿಪ್ರಾಯಪಟ್ಟಿದ್ದು, ಸಾರ್ವಜನಿಕರು ಇನ್ನಷ್ಟು ಮುಂಜಾಗ್ರತೆ ವಹಿಸುವುದು ಅಗತ್ಯವಾಗಿದೆ. ಜಗತ್ತಿನ ವಿವಿಧ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಯಾವುದೇ ಪರಿಸ್ಥಿತಿ ಎದುರಿಸಲು ಜಿಲ್ಲೆಯಲ್ಲಿ ಸಜ್ಜಾಗಿರೋಣ ಎಂದರು.