ಬೆಂಗಳೂರು: ನಿವಾರ್ ಚಂಡಮಾರುತ ಪರಿಣಾಮ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನ.27ರಂದು ಮಳೆ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಮುಂದುವರೆದಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ರಾಜ್ಯದಲ್ಲಿ ನ.28ರ ಬಳಿಕ ಮಳೆ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇಂದು (ನ.26) ದಿನವಿಡೀ ಜಿಟಿಜಿಟಿ ಮಳೆಯಾಗಿದೆ. ಸ್ವಲ್ಪ ಹೊತ್ತು ಜೋರಾಗಿ ಬಂದರೆ, ಬಿಡುವಿನ ಸಂದರ್ಭದಲ್ಲಿ ಸೋನೆ ಮಳೆಯಾಗಿದೆ. ಬೆಳಗ್ಗೆಯಿಂದಲೇ ಮಳೆ ಸುರಿಯುತ್ತಿರುವುದರಿಂದ ಕೆಲಸಕ್ಕೆ ಹೋಗುವ ಉದ್ಯೋಗಿಗಳಿಗೆ ಸ್ವಲ್ಪ ತೊಂದರೆಯಾಯಿತು.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ಮಂಡ್ಯ, ಕೋಲಾರ, ರಾಮನಗರ ಮತ್ತು ತುಮಕೂರು ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾದರೆ ಇನ್ನುಳಿದ ಜಿಲ್ಲೆಗಳಲ್ಲಿ ತುಂತುರು ಮಳೆಯಾದ ವರದಿಯಾಗಿದೆ.



