ದಾವಣಗೆರೆ: ರಸ್ತೆ ದಾಟುವಾಗ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ದಾವಣಗೆರೆ ಹೊರ ವಲಯದಲ್ಲಿ ಬಾತಿ ಬಳಿ ನಡೆದಿದೆ. ಈ ಅಪಘಾತ ಖಂಡಿಸಿ ಕಾಲೇಜು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಬಾತಿಯ ಹಾಲಿನ ಡೈರಿಯ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಎಚ್.ಕೆ.ಆರ್ ನಗರದ ನಿವಾಸಿ ಮನೋಜ್ ಕುಮಾರ್ (20) ಮೃತ ದುರ್ದೈವಿ. ದಾವಣಗೆರೆಯ ಹಳೇ ಬಾತಿ ಕೆರೆ ಬಳಿ ಅಪಘಾತ ಸಂಭವಿಸಿದೆ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿಯಾಗಿರುವ ಮನೋಜ್ ಕುಮಾರ್ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ವಲ್ಪ ದೂರಕ್ಕೆ ಬಿದ್ದ ಮನೋಜ್ ಗಂಭೀರ ಗಾಯಗೊಂಡಿದ್ದ. ಗಾಯಗೊಂಡು ನರಳಾಡುತ್ತಿದ್ದ ಮನೋಜ್‌ನನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಮಗನ ಸಾವಿನ ಸುದ್ದಿ ಕೇಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಪೋಷಕರಿಗೆ ಹಸ್ತಾಂತರ ಮಾಡಲಾಗಿದೆ. ಅಪಘಾತದಲ್ಲಿ ಆಯುರ್ವೇದ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯ ಅಶ್ವಿನಿ ಆಯುರ್ವೇದ ಮೆಡಿಕಲ್ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಹಾಗೂ ಪಿಡಬ್ಲ್ಯೂಡಿ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಂಪ್ಸ್ ಹಾಗೂ ಡಿವೈಡರ್‌ಗಳನ್ನು ಹಾಕುವಂತೆ ಮನವಿ ಮಾಡಿದರೂ ಅಧಿಕಾರಿಗಳು ನಿರ್ಲಕ್ಷ್ಯವನ್ನು ವಹಿಸಿದ್ದರು. ಹೀಗಾಗಿ ನಮ್ಮ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಆಕ್ರೋಶ ಹೊರಹಾಕಿದರು.



