ಭದ್ರಾ ಜಲಾಶಯ; ತೋಟ ಉಳಿಸಿಕೊಳ್ಳಲು, ಕುಡಿಯುವ ನೀರಿಗೆ ಆದ್ಯತೆ; ನಾಲೆಯ ಕೊನೆ ಭಾಗದ ರೈತರಿಗೆ ನೀರು ತಪಿಸಲು ತಂಡ ರಚನೆ- ಅಗತ್ಯವಿದ್ದಲ್ಲಿ 144 ಸೆಕ್ಷನ್ ಜಾರಿ..!!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಭದ್ರಾ ಜಲಾಶಯದಿಂದ ನಾಲೆಗೆ ಫೆ.16 ರಿಂದ 13 ದಿನ ನೀರು ಹರಿಸಲಾಗುತ್ತಿದೆ. ಅಡಿಕೆ, ತೆಂಗು ತೋಟ ಉಳಿಸಿಕೊಳ್ಳಲು, ಕುಡಿಯುವ ನೀರಿಗೆ ಮೊದಲ ಆದ್ಯತೆ. ನಾಲೆಯ ಕೊನೆ ಭಾಗದ ರೈತರಿಗೆ ನೀರು ತಪಿಸಲು ವಿವಿಧ ಇಲಾಖೆ ಅಧಿಕಾರಿಗಳ ತಂಡ ರಚನೆ ಮಾಡಲಾಗಿದ್ದು, ಅಗತ್ಯವಿದ್ದಲ್ಲಿ 144 ಸೆಕ್ಷನ್ ಜಾರಿ ತರಲು ಜಿಲ್ಲಾಧಿಕಾರಿ ವೆಂಕಟೇಶ್ ಎಂ.ವಿ.‌ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭದ್ರಾ ಜಲಾಶಯದಿಂದ ಬಲದಂಡೆ ನಾಲೆಗೆ ಈಗಾಗಲೇ ಫೆ.16 ರಿಂದಲೇ ನೀರು ಬಿಡಲಾಗಿದ್ದು ಫೆ.28 ರ ವರೆಗೆ ನೀರು ಹರಿಸಲಾಗುತ್ತದೆ. ಒಟ್ಟು 13 ದಿನಗಳವರೆಗೆ ಕಾಲುವೆಯಲ್ಲಿ ನೀರು ಹರಿಯಲಿದ್ದು ನಂತರ ನಿಲ್ಲಿಸಲಾಗುತ್ತದೆ. ಈ ವೇಳೆ ಕೊನೆಯ ಹಂತದ ರೈತರಿಗೂ ನೀರು ತಲುಪಿಸಬೇಕಾಗಿದೆ. ನೀರಿನ ಸಂಗ್ರಹ ಕಡಿಮೆ ಇರುವ ಕಾರಣ ಅರೆ ನೀರಾವರಿ ಬೆಳೆ ಬೆಳೆಯಲು ಸಲಹೆ ನೀಡಲಾಗಿದೆ. ಇರುವ ತೋಟಗಳನ್ನು ಉಳಿಸಿಕೊಳ್ಳಲು ಮತ್ತು ಕುಡಿಯುವ ನೀರಿನ ಕೊಳವೆಬಾವಿಗಳ ಅಂತರ್ಜಲ ಕಡಿಮೆಯಾಗದಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ ಎಂದರು.

ಬಲದಂಡೆಗೆ ಕೆಲವು ರೈತರು ಅನಧಿಕೃತವಾಗಿ ಪಂಪ್ ಅಳವಡಿಕೆ ಮಾಡಿಕೊಂಡು ನೀರೆತ್ತಲಾಗುತ್ತಿದೆ. ಇದರಿಂದ ಕೊನೆ ಭಾಗದ ರೈತರಿಗೆ ನೀರು ತಲುಪುತ್ತಿಲ್ಲ. ನೀರಾವರಿ ಇಲಾಖೆಗೆ ಸೇರಿರುವ ಜಾಗದಲ್ಲಿ ಅಂದರೆ ಭೂಸ್ವಾಧೀನವಾದ ಜಾಗದಲ್ಲಿಯೇ ಕೊಳವೆ ಬಾವಿ ಕೊರೆಯಿಸಿ ಟಿ.ಸಿ.ಗಳನ್ನು ಅಳವಡಿಸಿ ನೀರೆತ್ತಲಾಗುತ್ತಿದೆ. ನಿಯಮಾನುಸಾರ ಕ್ರಮ ಕೈಗೊಂಡು ಅನಧಿಕೃತವಾಗಿದ್ದಲ್ಲಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ. ಇದಕ್ಕಾಗಿ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳನ್ನೊಳಗೊಂಡು ದಾವಣಗೆರೆ, ಹರಿಹರ, ಚನ್ನಗಿರಿ ತಾಲ್ಲೂಕುಗಳಿಗೆ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಈ ತಂಡಗಳು ಎಲ್ಲೆಲ್ಲಿ ನಾಲೆಗೆ ಅನಧಿಕೃತವಾಗಿ ಪಂಪ್ ಅಳವಡಿಕೆ ಮಾಡಿದ್ದಾರೆ, ಅದನ್ನು ತೆರವು ಮಾಡುವರು ಮತ್ತು ರೈತರೇ ತೆರವು ಮಾಡದಿದ್ದಲ್ಲಿ ಪರಿಕರಗಳನ್ನು ಸರ್ಕಾರದ ವಶಕ್ಕೆ ಪಡೆದು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ ಎಂದರು.

ನಾಲೆಗೆ ನೀರು ಬಿಡಲಾಗಿದ್ದು ಅದರಲ್ಲಿ 10 ಅಡಿ ಮಾತ್ರ ನೀರು ಬರುತ್ತಿದೆ. ಇದು 13 ಅಡಿವರೆಗೆ ಏರಿಕೆಯಾದಲ್ಲಿ ಮಾತ್ರ ಕೊನೆ ಭಾಗದ ರೈತರಿಗೆ ತಲುಪಲು ಸಾಧ್ಯವಿದ್ದು ಅಗತ್ಯವಿದ್ದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗುತ್ತದೆ. ಬೆಸ್ಕಾಂ ವಿಜಿಲೆನ್ಸ್ ತಂಡದವರು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಲ್ಲಿ ಕಡಿತಗೊಳಿಸಲು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಮಾತನಾಡಿ ಶಾಂತಿ ಸಾಗರದಲ್ಲಿ ಜಿಲ್ಲೆಯ ಚನ್ನಗಿರಿ, ಬಹುಗ್ರಾಮಗಳು ಸೇರಿದಂತೆ ಚಿತ್ರದುರ್ಗ ಜಿಲ್ಲೆಗೆ ನೀರು ಪೂರೈಸಲಾಗುತ್ತದೆ. ಆದರೆ ಶಾಂತಿಸಾಗರದಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ. ನಾಲೆಯಿಂದ ನೀರು ಬಿಡುಗಡೆ ಮಾಡಿದಲ್ಲಿ ಬೇಸಿಗೆಗೆ ನೀರು ಪೂರೈಸಲು ಸಾಧ್ಯವಾಗಲಿದೆ. ಮತ್ತು ರಾಜನಹಳ್ಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕೆಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರಿನ್ ಭಾನು ಎಸ್.ಬಳ್ಳಾರಿ, ಬಿ.ಆರ್.ಪ್ರಾಜೆಕ್ಟ್ ಅಧೀಕ್ಷಕ ಇಂಜಿನಿಯರ್ ಸುಜಾತ, ಉಪವಿಭಾಗಾಧಿಕಾರಿ ದುರ್ಗಶ್ರೀ, ಭದ್ರಾ ನಾಲಾ.ನಂ.5 ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್ ಆರ್.ಬಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *