ದಾವಣಗೆರೆ: ಭದ್ರಾ ಜಲಾಶಯ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ತೀವ್ರ ಬರದಿಂದ 68 ವರ್ಷದಲ್ಲಿಯೇ ಕಡಿಮೆ ನೀರು ಸಂಗ್ರಹವಾಗಿದ್ದ ಭದ್ರಾ ಜಲಾಯಶಕ್ಕೆ ಮುಂಗಾರು ಪೂರ್ವ ಮಳೆಯಿಂದ ಮತ್ತೆ ಒಳ ಹರಿವು ಶುರುವಾಗಿದೆ.
ಭದ್ರಾವತಿಯ ಲಕ್ಕವಳ್ಳಿಯ ಭದ್ರಾ ಜಲಾಶಯದ ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ ಅಡಿ, ಇಂದಿನ ನೀರಿನ ಮಟ್ಟ 13.83 ಟಿಎಂಸಿ ನೀರಿದೆ. ಚಿಕ್ಕಮಗಳೂರು ಭಾಗದಲ್ಲಿ ಪೂರ್ವ ಮುಂಗಾರು ಮಳೆಯು ಅಬ್ಬರಿಸುತ್ತಿದೆ. ಆದ್ದರಿಂದ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಬುಧವಾರ ಜಲಾಶಯಕ್ಕೆ 2332 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಹೊರ ಹರಿವು 376 ಕ್ಯುಸೆಕ್ ಆಗಿದೆ.
ಕುಡಿಯುವ ನೀರಿನ ಉದ್ದೇಶಕ್ಕಾಗಿ ಮೇ.22ರ ರಾತ್ರಿ 10 ಗಂಟೆಯಿಂದ ಮೇ 28ರವರೆಗೆ ಪ್ರತಿ ದಿನ 2,000 ಕೂಸೆಕ್ಸ್ ನೀರು ಹರಿಸಲು ಸರ್ಕಾರ ಆದೇಶಿಸಿದೆ. ಗದಗ, ಹಾವೇರಿ ಜಿಲ್ಲಾ ವ್ಯಾಪ್ತಿಗೆ ಬರುವ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕಾಗಿ ನದಿಗೆ ನೀರು ಹರಿಸಲಾಗುತ್ತಿದೆ. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಲಿ, ಇತರೆ ಚಟುವಟಿಕೆಗಾಗಿ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪಂಪ್‍ಸೆಟ್‍ಗಳಿಂದ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಬಾರದು. ಈಗಾಗಲೇ ಗದಗ, ಹಾವೇರಿ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲು ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲಾಗಿದೆ. ಈಗ ಮತ್ತೆ ನೀರು ಹರಿಸಬಾರದು ಎಂದು ಮನವಿ ಮಾಡಲಾಗಿತ್ತು.ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್. ಆರ್. ಬಸವರಾಜಪ್ಪ ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದರು.
ಭದ್ರಾ ಡ್ಯಾಂ ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳು ಮಾತ್ರವಲ್ಲದೇ ಗದಗ, ಹಾವೇರಿ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲು ಸಹ ಆಧಾರವಾಗಿದೆ. ಕುಡಿಯುವ ನೀರಿನ ಯೋಜನೆಗಳಿಗೆ ನೀರೆತ್ತಲು ಡ್ಯಾಂ ನೀರು ನದಿಗೆ ಹರಿಸಲೇಬೇಕಾಗುತ್ತದೆ.