ಶಿವಮೊಗ್ಗ; ತರಿಕೇರಿ ಮತ್ತು ಭದ್ರಾವತಿ ತಾಲ್ಗಲೂಕು ಗಡಿಯಲ್ಲಿರುವ ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ಎಡ ಹಾಗೂ ಬಲದಂಡೆ ನಾಲೆಗೆ ಇಂದು (ಜು.29) ರಾತ್ರಿಯಿಂದ ನೀರು ಹರಿಸಲು ಸೋಮವಾರ ನಡೆದ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಮಲವಗೊಪ್ಪದ ಭದ್ರಾ ಕಾಡಾ ಸಮಿತಿ ಕಚೇರಿ ಸಭಾಂಗಣದಲ್ಲಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಇಂದು ಸಂಜೆ, ಇಲ್ಲವೇ ರಾತ್ರಿ ಕಾಲುವೆಗೆ ನೀರು ಹರಿಸುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು (ಜು.29) ರಾತ್ರಿಯಿಂದ ಎಡದಂಡೆ
ಮತ್ತು ಬಲದಂಡೆ ನಾಲೆಗೆ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಹಾಗೂ ಅಧೀಕ್ಷಕ ಅಭಿಯಂತರರು, ಸದಸ್ಯ ಕಾರ್ಯದರ್ಶಿ ಎನ್ ಸುಜಾತಾ ತಿಳಿಸಿದ್ದಾರೆ.
ಸಭೆಯಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ, ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ, ಹರಿಹರ ಶಾಸಕ ಬಿ.ಪಿ.ಹರೀಶ, ಮಾಯಕೊಂಡ ಶಾಸಕ ಬಸವಂತಪ್ಪ, ವಿಜಯ ನಗರ ಜಿಲ್ಲೆ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ, ಕಾಡಾ ಅಧ್ಯಕ್ಷ ಡಾ.ಅಂಶುಮಂತ್ , ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿ, ರೈತ ಮುಖಂಡರು ಭಾಗಿಯಾಗಿದ್ದರು. ಸಭೆಯಲ್ಲಿ ದಾವಣಗೆರೆ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರು ಗೈರಾಗಿದ್ದರು.



