ದಾವಣಗೆರೆ: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಗ್ರಾಮದ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ದೇವರಹಳ್ಳಿ ಗ್ರಾಮದ ರಂಗಸ್ವಾಮಿ (55) ಮೃತಪಟ್ಟ ವ್ಯಕ್ತಿ. ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಕೆಂಚಪ್ಪಗೆ ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದ ಬಳಿ ಹೋಟೆಲ್‌ನಲ್ಲಿ ಊಟ ಮಾಡಲು ಲಾರಿಯನ್ನು ಹೆದ್ದಾರಿ ಪಕ್ಕ ನಿಲ್ಲಿಸಲಾಗಿತ್ತು. ಆಗ ವೇಗವಾಗಿ ಬಂದ ಬೈಕ್ ಲಾರಿಗೆ ಡಿಕ್ಕಿ ಹೊಡೆದಿದೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.