ದಾವಣಗೆರೆ: ಬೂತ್ ಮಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಜ.21 ರಿಂದ 29ರವರೆಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಜ.21ರಂದು ಬೆಳಗ್ಗೆ 11.30 ಕ್ಕೆ ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಚಾಲನೆ ನೀಡಲಿದ್ದಾರೆಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಮಾಹಿತಿ ನೀಡಿದರು
ರಾಜ್ಯಾದ್ಯಂತ ನಡೆಯಲಿರುವ ಬೂತ್ ವಿಜಯ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಉದ್ಘಾಟನೆ ಮಾಡಲಿದ್ದಾರೆ.ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಗೆ ಪರಿಷತ್ ಸದಸ್ಯ ನವೀನ್ , ಜೇಷ್ಠಾ ಪಡಿಯಾಳ್ , ಸಂಸದ ಜಿ.ಎಂ ಸಿದ್ದೇಶ್ವರ್ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಆಗಮಿಸಲಿದ್ದಾರೆಂದರು.
ಸಂಕಲ್ಪ ಅಭಿಯಾನಕ್ಕಾಗಿ ಜಿಲ್ಲೆಯಲ್ಲಿ ಐದು ಜನರ ತಂಡ ರಚಿಸಲಾಗಿದೆ. ಈ ತಂಡದಲ್ಲಿ ಪಾಲಿಕೆ ಸದಸ್ಯ ಪ್ರಸನ್ನಕುಮಾರ್, ನಾಗರಾಜ್, ರಮೇಶ್, ರಾಜು, ಶಿವಾನಂದ ಇದ್ದು ಸಂಕಲ್ಪ ಅಭಿಯಾನ ಯಶಸ್ವಿಗೆ ಶ್ರಮಿಸಲಿದ್ದಾರೆ ಎಂದರು. ಇದೊಂದು ಸರ್ವಸ್ಪರ್ಶಿ ಕಾರ್ಯಕ್ರಮವಾಗಿದೆ. 2 ಕೋಟಿ ಮತದಾರರನ್ನು ಈ ವಿಜಯ ಸಂಕಲ್ಪ ಅಭಿಯಾನದ ಮೂಲಕ ನಮ್ಮ ಕಾರ್ಯಕರ್ತರು ತಲುಪುತ್ತಾರೆ. 10 ವಿಭಾಗಗಳಲ್ಲಿ,39 ಸಂಘಟನಾತ್ಮಕ ಜಿಲ್ಲೆಗಳಲ್ಲಿ, 312 ಮಂಡಲಗಳಲ್ಲಿ ನಮ್ಮ ಕಾರ್ಯಕರ್ತರು ಬಿಜೆಪಿಯ ಸಾಧನೆಯನ್ನು ಮನೆ ಮನೆಗೆ ತಲುಪಿಸಲಿದ್ದಾರೆ ಹಾಗೂ ಕೇಂದ್ರ -ರಾಜ್ಯ ಸರಕಾರಗಳ ಸಾಧನೆಗಳ ಕುರಿತು ಕರಪತ್ರಗಳನ್ನು ಹಂಚಿಕೆ ಮಾಡಲಾಗುವುದು.
2 ಕೋಟಿಗಿಂತ ಹೆಚ್ಚು ಮತದಾರರ ಸಂಪರ್ಕ ಮಾಡಿ, ಅವರ ಮನೆಮನೆಗೆ ತೆರಳಿ ಕರಪತ್ರ ಹಂಚಲಿದ್ದೇವೆ, ಫಲಾನುಭವಿಗಳನ್ನು ಮಾತನಾಡಿಸಿ ಒಂದು ಕೋಟಿಗಿಂತ ಹೆಚ್ಚು ಕುಟುಂಬಗಳನ್ನು ಸಂಪರ್ಕಿಸಲಿದ್ದೇವೆ. ಬಿಜೆಪಿ ಸರಕಾರಗಳ ಯೋಜನೆಗಳಿಂದ ಈ ಕುಟುಂಬಗಳ ಸಬಲೀಕರಣ ಆದುದನ್ನು ತಿಳಿಸಲಿದ್ದೇವೆ. ವಾಹನಗಳ ಮೇಲೆ ಸ್ಪೀಕರ್ ಹಾಕಿಸುವ ಕೆಲಸವೂ ನಡೆಯಲಿದೆ ಎಂದರು.



