ಬೆಂಗಳೂರು: ಸಿಡಿ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲ 224 ಶಾಸಕರ ವಿರುದ್ಧವೂ ತನಿಖೆ ನಡೆಯಲಿ. ಯಾರಿಗೆ ಅನೈತಿಕ ಸಂಬಂಧವಿದೆ ಯಾರ ಬಂಡವಾಳ ಏನು ಎಂಬುದು ತನಿಖೆ ಮೂಲಕ ಬಯಲಾಗಲಿ ಎಂದು ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಸಿಡಿ ವಿಚಾರವಾಗಿ ಕಾಂಗ್ರೆಸ್ ನಾಯಕರು ಸದನದಲ್ಲಿ ಪ್ರತಿಭಟನೆ ಮುಂದುವರೆಸಿರುವ ಹಿನ್ನೆಲೆಯಲ್ಲಿ ಹಾಗೂ 6 ಸಚಿವರ ರಾಜೀನಾಮೆಗೆ ಒತ್ತಾಯಿಸಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ, ರಮೇಶ್ ಕುಮಾರ್ ಇವರೆಲ್ಲರೂ ಸತ್ಯ ಹರಿಶ್ಚಂದ್ರರೇ? ಇವರೆಲ್ಲ ಏಕಪತ್ನಿ ವ್ರತವನ್ನು ಬಹಳ ನಿಷ್ಠೆಯಿಂದ ಪಾಲಿಸುತ್ತಿದ್ದಾರಾ? ಇಂದು ಇವರೆಲ್ಲ ಸಮಾಜಕ್ಕೆ ಮಾದರಿಯಾಗಿದ್ದಾರೆ ಅಲ್ಲವೇ? ಇವರೆಲ್ಲರ ವಿರುದ್ಧ ಮಾತ್ರವಲ್ಲ ನನ್ನನ್ನೂ ಸೇರಿದಂತೆ ಎಲ್ಲಾ ಸಚಿವರು, ಶಾಸಕರ ವಿರುದ್ಧವೂ ತನಿಖೆಯಾಗಲಿ ಎಂದು ಆಗ್ರಹಿಸಿದರು.



