ದಾವಣಗೆರೆ: ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು. ಈ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದರು.
ದಾವಣಗೆರೆ ನಗರದ ಜಿಎಂಐಟಿಯಲ್ಲಿ ಗಾಂಧಿಭವನ, ಕೊಂಡಜ್ಜಿಯ ಪೊಲೀಸ್ ಪಬ್ಲಿಕ್ ವಸತಿ ಶಾಲೆಗೆ ವರ್ಚುವಲ್ ಮೂಲಕ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಸ್ವಯಂ ನಿರ್ಧಾರದಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಆಯ್ಕೆ ಮಾಡಲಾಗಿದೆ. ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.
ಬೊಮ್ಮಾಯಿ ಅವರು ವೈಯಕ್ತಿಕ, ರಾಜಕೀಯವಾಗಿ ಉತ್ತಮ ಹೆಸರು ಹೊಂದಿದ್ದಾರೆ. ಹೀಗಾಗಿ ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸಲಿದೆ. ಯಡಿಯೂರಪ್ಪ ಎರಡು ವರ್ಷ ಒಳ್ಳೆಯ ಕೆಲಸ ಮಾಡಿದ್ದಾರೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಪಕ್ಷಕ್ಕಾಗಿ ಅವರ ಕೊಡಗೆ ದೊಡ್ಡದಿದೆ ಎಂದರು.
ಮುಂಬರುವ ದಿನಗಳಲ್ಲಿ ಬಿಜೆಪಿ ಮತ್ತಷ್ಟು ಬಲಿಷ್ಠವಾಗಲಿದೆ. ಕರ್ನಾಟಕವು ಬೇರೆ ರಾಜ್ಯಗಳಿಗಿಂತಲೂ ಅಭಿವೃದ್ಧಿ ವಿಚಾರದಲ್ಲಿ ಉನ್ನತ ಸ್ಥಾನ ಗಳಿಸಲಿ ಎಂದರು.