ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಏಪ್ರಿಲ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ವಿರೂಪಾಕ್ಷಪ್ಪ ಅವರನ್ನು ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧಿಸಲಾಗಿತ್ತು. ಮಾರ್ಚ್ 28ರಂದು ನ್ಯಾಯಾಲಯವು ಲೋಕಾಯಯಕ್ತ ವಶಕ್ಕೆ ಒಪ್ಪಿಸಿ ಆದೇಶ ನೀಡಿತ್ತು. ಲೋಕಾಯುಕ್ತ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಇಂದು ( ಏ.01) ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಏ. 11ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಆದೇಶ ನೀಡಿದೆ. ನ್ಯಾಯಾಲಯ ಆದೇಶ ನೀಡಿದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲು ಸಿದ್ಧತೆ ನಡೆದಿದೆ. ಈ ವೇಳೆ, ತಮಗಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ವಿರೂಪಾಕ್ಷಪ್ಪ ಅಧಿಕಾರಿಗಳ ಬಳಿ ಮಾಹಿತಿ ನೀಡಿದ್ದಾರೆ. ಈ ಮಧ್ಯೆಯೇ ಅವರನ್ನು ಲೊಕಾಯುಕ್ತ ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕರೆದೊಯ್ದಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಮಾಡಾಳ್ ಬಂಧನಕ್ಕೆ ಬಲೆ ಬೀಸಿದ್ದರು. ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀರ ಬಲೆಗೆ ಬಿದ್ದಿದ್ದರು. ನಂತರ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು.
ಮನೆಯಲ್ಲಿಯೂ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು. ಬಳಿಕ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರಿಗೆ ತರಾತುರಿಯಲ್ಲಿ ಜಾಮೀನು ಮಂಜೂರು ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.
ಮಾಡಾಳ್ ಪುತ್ರ ಪ್ರಶಾಂತ್ ಬೆಂಗಳೂರು ಜಲಪೂರೈಕೆ ಮತ್ತು ಒಳಚರಂಡಿ ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎಂಬ ಆರೋಪ ಅವರ ಮೇಲಿದೆ. ಲೋಕಾಯುಕ್ತ ದಾಳಿ ಕೋಟ್ಯಂತರ ರೂಪಾಯಿ ಪತ್ತೆಯಾಗಿತ್ತು.