ದಾವಣಗೆರೆ: ಸರ್ಕಾರ ಜಿಲ್ಲೆಯ ಚನ್ನಗಿರಿ ಜನರಿಗೆ ಗುಡ್ ನ್ಯೂಸ್ ನೀಡಿದೆ. ತಾಲ್ಲೂಕು ಆಸ್ಪತ್ರೆಯನ್ನು 100 ರಿಂದ 250 ಹಾಸಿಗೆ ಸಾಮರ್ಥ್ಯ ಆಸತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಆಸತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ರೂ. 2650.00 ಲಕ್ಷಗಳ ಅಂದಾಜು ಮೊತ್ತಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಚನ್ನಗಿರಿ ಸಾರ್ವಜನಿಕ ಆಸ್ಪತ್ರೆಯು 100 ಹಾಸಿಗೆಗಳ ಸಾಮರ್ಥ್ಯವುಳ್ಳ ಆಸ್ಪತ್ರೆಯಾಗಿದ್ದು, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿ.ಮೀ. ದೂರದಲ್ಲಿರುತ್ತದೆ.
ರೋಗಿಗಳಿಗೆ ತುರ್ತು ಚಿಕಿತ್ಸೆ ಅವಶ್ಯವಿದ್ದಾಗ ಸುಲಭ ಚಿಕಿತ್ಸೆ ಸಾಧ್ಯವಾಗದೇ ತೊಂದರೆ ಉಂಟಾಗುತ್ತಿದೆ. ಅದಲ್ಲದೇ ಚನ್ನಗಿರಿ ತಾಲ್ಲೂಕಿನಲ್ಲಿ ಹೆಚ್ಚಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರು ವಾಸಿಸುತ್ತಿದ್ದು, ಕಡುಬಡವರಾಗಿದ್ದು, ಜಿಲ್ಲಾ ಕೇಂದ್ರಗಳಿಗೆ ಹೋಗಿ ಹೆಚ್ಚಿನ ಚಿಕಿತ್ಸೆಯನ್ನು ಪಡೆಯಲು ಶಕ್ತರಾಗಿರುವುದಿಲ್ಲ ಉಲ್ಲೇಖಿಸಲಾಗಿದೆ.



