ದಾವಣಗೆರೆ: ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಇಂದಿಗೂ ಪ್ರಸ್ತುತ. ಭಾರತದಂತಹ ಅಭಿವೃದ್ಧಿಶೀಲ ದೇಶಗಳ ಆರ್ಥಿಕ ಸ್ವಾವಲಂಬನೆಗೆ ಗ್ರಾಮ ಸ್ವರಾಜ್ಯ ಪರಿಕಲ್ಪನೆ ಅತ್ಯಗತ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಕೊರೊನಾ ಕಾರಣ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಇಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಯ ನ್ಯಾಮತಿ ತಾಲ್ಲೂಕು ಸುರಹೊನ್ನೆ ಗ್ರಾಮದಲ್ಲಿ ಇಂದು ಚಾಲನೆ ನೀಡಿ ಮಾತನಾಡಿದರು.
ಸರ್ಕಾರವನ್ನು ಹಳ್ಳಿಗಳತ್ತ, ಜನರ ಮನೆ ಬಾಗಿಲಿಗೆ ಕೊಂಡೊಯ್ದು, ಅವರ ಸಮಸ್ಯೆ ಗೆ ಸ್ಥಳೀಯ ವಾಗಿಯೇ ಪರಿಹಾರ ಕಂಡುಕೊಳ್ಳುವಂತಾಗಲು ಕಂದಾಯ ಸಚಿವರಾದ ಆರ್ ಅಶೋಕ್ ಅವರು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ಕಡೆ ಎಂಬ ವಿನೂತನ ಕಾರ್ಯಕ್ರಮ ಪ್ರಾರಂಭಿಸಿ, ಯಶಸ್ವಿಯಾಗಿ ನೆರವೇರಿಸಲಾಗಿದೆ. ಆದರೆ ಕೊರೊನಾ ಹಿನ್ನೆಲೆ ಗ್ರಾಮ ವಾಸ್ತವ್ಯಕ್ಕೆ ಹಿನ್ನೆಡೆಯಾಗಿತ್ತು. ಇದೀಗ ಮತ್ತೆ ಗ್ರಾಮ ವಾಸ್ತವ್ಯಕ್ಕೆ ಕಾಲ ಕೂಡಿ ಬಂದಿದೆ ಎಂದರು.
ಜಿಲ್ಲೆಯ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಕುಂದೂರು, ಸುರಹೊನ್ನೆ ಗ್ರಾಮಗಳಲ್ಲಿ ಇಂದು ಕಂದಾಯ ಸಚಿವ ಆರ್. ಅಶೋಕ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಗ್ರಾಮ ವಾಸ್ತವ್ಯ ಮಾಡಲಿದ್ದು ಸರ್ಕಾರದ ವಿವಿಧ ಸೌಲಭ್ಯ ತಲುಪಿಸಲು ಸಿಎಂ ಚಾಲನೆ ನೀಡಿದರು.
ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್, ಮುಖ್ಯಮಂತ್ರಿ ಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ, ಶಾಸಕರುಗಳಾದ ಮಾಡಳ್ ವಿರೂಪಾಕ್ಷಪ್ಪ, ಪ್ರೊ. ಲಿಂಗಣ್ಣ, ಡಿಸಿ. ಮಹಾಂತೇಶ್ ಬೀಳಗಿ, ಸಿಇಒ ವಿಜಯ ಮಹಾಂತೇಶ್, ಎಸ್.ಪಿ. ರಿಷ್ಯಂತ್ ಸೇರಿದಂತೆ ಹಲವರು ಭಾಗವಹಿಸಿದ್ದರು.



