ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ನಾಳೆ ರಾಜ್ ಭವನ ಚಲೋ ಹಮ್ಮಿಕೊಳ್ಳಲಾಗಿದೆ. ದಾವಣಗೆರೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ನಗರದ ಬಾಪೂಜಿ ಅತಿಥಿ ಗೃಹದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ರಾಜ್ಯದ 30 ಜಿಲ್ಲೆಗಳಿಂದ ರೈತರು, ಕಾರ್ಮಿಕರು ಬೆಂಗಳೂರಿನಲ್ಲಿ ಸೇರಿ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಫ್ರೀಡಂ ಪಾರ್ಕ್ ವರೆಗೂ ಪಾದಯಾತ್ರೆ ನಡೆಸಿ, ತದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ಜಾರಿಗೆ ತರುವ ಮೂಲಕ ದೇಶದ ಕೃಷಿ ವಲಯ ನಾಶ ಮಾಡಲು ಹೊರಟಿರುವುದನ್ನು ವಿರೋಧಿಸಿ ರೈತರು ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದ ಹೋರಾಟ ನಿರಂತವಾಗಿ ನಡೆಯುತ್ತಿದ್ದರೂ ರೈತರ ಸಮಸ್ಯೆ ಬಗೆಹರಿಸಲು ಮುಂದಾಗದಿರುವುದು ಅತ್ಯಂತ ಖಂಡನೀಯ. ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಏಳು ವರ್ಷ ಕಳೆದರೂ ರೈತರ ಪರವಾದ ಒಂದೇ ಒಂದು ಕಾನೂನು ಜಾರಿಗೆ ತಂದಿಲ್ಲ. ಆದರೆ, ಕಾಂಗ್ರೆಸ್ ಪಕ್ಷ ಅನ್ನದಾತರನ್ನು ರಕ್ಷಿಸಲು ಮುಂದಾಗಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮಾತನಾಡಿ, ಕೆಪಿಸಿಸಿಯಿಂದ ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ರಾಜಭವನ್ ಚಲೋ, ರೈತರ ಅಧಿಕಾರ ದಿವಸ್ ಕಾರ್ಯಕ್ರಮಕ್ಕೆ ತೆರಳಲು ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಗಳಿಂದ ನಾಲ್ಕೈದು ಬಸ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಯಿಂದ ಒಂದೂವರೆಯಿಂದ ಎರಡು ಸಾವಿರ ಜನ ತೆರಳಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಅಬ್ದುಲ್ ಜಬ್ಬಾರ್, ಮಾಜಿ ಶಾಸಕ ಎಚ್.ಪಿ.ರಾಜೇಶ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಕೆ.ಎಸ್.ಬಸವಂತಪ್ಪ, ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಮುಖಂಡರಾದ ಡಾ.ವೈ.ರಾಮಪ್ಪ, ದೇವರಮನಿ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್, ಬಿ.ಎಚ್.ವೀರಭದ್ರಪ್ಪ ಮತ್ತಿತರರು ಹಾಜರಿದ್ದರು.



