ದಾವಣಗೆರೆ: ದಾವಣಗೆರೆಯಲ್ಲಿ ನಾಳೆ (ಜ.06) 15 ರಿಂದ 18 ವರ್ಷದೊಳಗಿನ ನಗರದ ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳಿಗೆ ಲಸಿಕೆ ನೀಡುವ ಸಲುವಾಗಿ 7800 ಡೋಸ್ ಕೋವ್ಯಾಕ್ಸಿನ್ ಲಸಿಕೆ ಹಂಚಿಕೆ ಮಾಡಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ತಿಳಿಸಿದ್ದಾರೆ.
ಕೋವ್ಯಾಕ್ಸಿನ್ ಲಸಿಕೆಯನ್ನು ಶಾಲೆ, ಕಾಲೇಜುಗಳಲ್ಲಿ ಅಥವಾ ಸಮೀಪದ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಲಸಿಕಾಕರಣ ಮಾಡಲಾಗುತ್ತಿದೆ. ಜ. 03 ರಿಂದ ಕಾರ್ಯಕ್ರಮ ಪ್ರಾರಂಭವಾಗಿದ್ದು, ಈಗಾಗಲೇ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳ ಶಾಲಾ ಮಕ್ಕಳಿಗೆ ನೀಡುವ ಲಸಿಕೆ ಕಾರ್ಯಕ್ರಮ ಶೇ. 98 ರಷ್ಟು ಪೂರ್ಣಗೊಂಡಿದ್ದು, ಗೈರುಹಾಜರಿ, ಅನಾರೋಗ್ಯ ನಿಮಿತ್ತ ಬಾಕಿ ಇರುವ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿಕೆ ಎರಡ್ಮೂರು ದಿನಗಳಲ್ಲಿ ಆಗಲಿದ್ದು, ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಶೀಘ್ರ ಶೇ. 100 ರ ಗುರಿ ಸಾಧನೆಯಾಗಲಿದೆ.
ಉಳಿದಂತೆ ದಾವಣಗೆರೆ ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗಳಿರುವುದರಿಂದ, ಮಕ್ಕಳಿಗೆ ಲಸಿಕೆ ನೀಡಿಕೆ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದಕ್ಕಾಗಿಯೇ ನಗರವೊಂದಕ್ಕೆ ಜ. 06 ರ ದಿನಕ್ಕೆ 7800 ಡೋಸ್ ಲಸಿಕೆ ಹಂಚಿಕೆ ಮಾಡಲಾಗಿದೆ. ಅಲ್ಲದೆ ತಾಲ್ಲೂಕಿನ ಎಲ್ಲ 25 ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಶಾಲಾ ಮಕ್ಕಳಿಗೂ ಕೋವ್ಯಾಕ್ಸಿನ್ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ತಿಳಿಸಿದ್ದಾರೆ.