ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್-19 ಕೇರ್ ಸೆಂಟರ್ ತೆರೆಯಲು ಚಿಂತನೆ : ಜಿಲ್ಲಾಧಿಕಾರಿ ಮಾಹಂತೇಶ್ ಬೀಳಗಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ:  ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.  ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್‍ಗಳನ್ನು ಪುನರ್ ಪ್ರಾರಂಭಿಸಲು ಗಂಭೀರ ಚಿಂತನೆ ನಡೆಸಲಾಗಿದ್ದು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಆಕ್ಸಿಜನ್ ಪೂರೈಕೆ ವ್ಯವಸ್ಥೆ ಮತ್ತು ಉಪಕರಣಗಳನ್ನು ಸುಸ್ಥಿಯಲ್ಲಿಡುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಆಯೋಜಿಸಿದ್ದ ಕೊರೊನಾ ನಿಯಂತ್ರಣ ಕುರಿತ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಜಿಲ್ಲೆಯಲ್ಲಿ 513 ಕೋವಿಡ್-19 ಸಕ್ರಿಯ ಪ್ರಕರಣಗಳಿದ್ದು ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಗಂಭೀರತೆ ಪಡೆದುಕೊಳ್ಳುತ್ತಿದೆ. ಕೋವಿಡ್‍ನ ಎರಡನೆ ಅಲೆಯ ಚೈನ್ ಲಿಂಕ್ ಅನ್ನು ಕಡಿತಗೊಳಿಸುವುದು ತೀವ್ರ ಅಗತ್ಯವಿದೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ತಡೆಗಟ್ಟಲು ಹಾಗೂ ಸೋಂಕಿತರಿಗೆ ಸಮರ್ಪಕ ವೈದ್ಯಕೀಯ ನೆರವು ನೀಡಲು ನಾವು ಸಿದ್ದರಾಗಬೇಕಿದೆ. ಹೀಗಾಗಿ ನಾವು ಪರಿಣಾಮಕಾರಿಯಾದಂತಹ ಕೆಲಸ ನಿರ್ವಹಿಸುವ ಆಗತ್ಯವಿದ್ದು, ಸಂಬಧಿಸಿದ ಕೆಲಸಗಳಿಗೆ ಯಾವುದೇ ಕಾರಣಗಳನ್ನು ನೀಡದೆ ನಿಗದಿತ ಕಾಲಮಿತಿಯೊಳಗೆ ಮಾಡಿ ಮುಗಿಸಬೇಕು. ಕಳೆದ ವರ್ಷ ಸೋಂಕಿತರ ಸಂಖ್ಯೆ ಹೆಚ್ಚಾದ ಸಂದರ್ಭದಲ್ಲಿ ಜಿಲ್ಲೆಯ ಹಾಸ್ಟೆಲ್‍ಗಳಲ್ಲಿ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ಗಳನ್ನು ತೆರೆದು, ಸೋಂಕಿತರಿಗೆ ವೈದ್ಯಕೀಯ ನೆರವು ನೀಡಿದ ಅನುಭವ ಇದೆ. ಹೀಗಾಗಿ ಜಿಲ್ಲೆಯಲ್ಲಿ ಮುಂದಿನ 15 ದಿನಗಳಲ್ಲಿ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ಗಳನ್ನು ಹಾಸ್ಟೆಲ್‍ಗಳಲ್ಲಿ ಪ್ರಾರಂಭಿಸುವ ಅಗತ್ಯ ಬರಬಹುದು. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಏ. 22 ರ ಬಳಿಕ ಹಾಸ್ಟೆಲ್‍ಗಳು ಬಳಕೆಗೆ ಲಭ್ಯವಾಗಲಿದ್ದು, ಬಳಸಿಕೊಳ್ಳಲು ಅಗತ್ಯ ನೆರವು ಒದಗಿಸಲಾಗುವುದು ಎಂದರು.

ಕೋವಿಡ್ ಸೋಂಕು ಪ್ರಕರಣಗಳನ್ನು ನಿಯಂತ್ರಿಸುವ ದಿಸೆಯಲ್ಲಿ ಯಾವುದೇ ವ್ಯವಸ್ಥೆ ಹಾಗೂ ನಿರ್ವಹಣೆ ಕೈಗೊಳ್ಳುವಲ್ಲಿ ಯಾವುದೇ ರೀತಿಯ ಅಡಚಣೆ ಉಂಟಾದಲ್ಲಿ ತಕ್ಷಣ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಮತ್ತು ಅಗತ್ಯವಿರುವ ಎಲ್ಲಾ ಉಪಕರಣಗಳು ಹಾಗೂ ಆಂಬುಲೆನ್ಸಗಳನ್ನು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.

ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಸದ್ಯ 23 ಜನ ಐಸೋಲೇಷನ್‍ನಲ್ಲಿ ಇದ್ದು, 182 ಜನ ಹೋಂ ಐಸೋಲೇಷನ್‍ನಲ್ಲಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲೂ ಸಹ ನಿಗದಿತ ಪ್ರಮಾಣದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸಗಾಗಿ ಬೆಡ್‍ಗಳನ್ನು ಕಾಯ್ದಿರಿಸಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗಾಗಿ ಅಗತ್ಯ ಬೆಡ್, ಐಸಿಯು ಹಾಗೂ ವೆಂಟಿಲೇಟರ್‍ಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸುಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು. ಜಿಲ್ಲಾ ಆರೋಗ್ಯ ಅಧಿಕಾರಿಳು ಸರ್ಕಾರಿ ಆಸ್ಪತ್ರೆಗಳಿಗೆ ಖುದ್ದಾಗಿ ಭೇಟಿ ನೀಡಿ ಸುಸ್ಥಿತಿಯಲ್ಲಿರುವ ಕುರಿತು ದೃಢೀಕರಣವನ್ನು ಜಿಲ್ಲಾಧಿಕಾರಿಗಳಿಗೆ ಎರಡು ದಿನಗಳ ಒಳಗಾಗಿ ಸಲ್ಲಿಸಬೇಕು.

ವೈದ್ಯಕೀಯ ಬಳಕೆಗಾಗಿ ಉಪಯೋಗಿಸಲಾಗುವ ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಕೋವಿಡ್-19 ಟೆಸ್ಟ್ ದತ್ತಾಂಶವನ್ನು ಐಸಿಎಮ್‍ಆರ್ ಪೋರ್ಟಲ್ ನಲ್ಲಿ ಅಳವಡಿಸುವ ಕಾರ್ಯ ಬಾಕಿ ಉಳಿದಿರುವ ವಿಷಯ ತಿಳಿದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕೋವಿಡ್ ಟೆಸ್ಟ್ ವರದಿಯ ದತ್ತಾಂಶವನ್ನು ಪೋರ್ಟಲ್‍ನಲ್ಲಿ ದಾಖಲಿಸಲು ಅಗತ್ಯ ಕಂಪ್ಯೂಟರ್ ಹಾಗೂ ಸಿಬ್ಬಂದಿಯನ್ನು ಒದಗಿಸುವಂತೆ ತಾಕೀತು ಮಾಡಿದರು.

ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳು ಅಗತ್ಯವಿಲ್ಲದಿದ್ದರೂ ಹೆಚ್ಚಿನ ಪ್ರಮಾಣದಲ್ಲಿ ರೆಮ್‍ಡೆಸಿವಿರ್ ಚುಚ್ಚುಮದ್ದನ್ನು ಕೇಳುತ್ತಿದ್ದಾರೆ ಎನ್ನುವ ವಿಷಯವಾಗಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಹನುಮಂತರಾಯ ಅವರು, ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಯಂತೆಯೇ ಚುಚ್ಚುಮದ್ದನ್ನು ಬಳಸಬೇಕು. ಕರ್ನಾಟಕ ವಿಪ್ಪತ್ತು ನಿರ್ವಹಣೆ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಜಾಮಿನು ರಹಿತ ವಾರೆಂಟ್ ಹೋರಡಿಸಲಾಗುವುದು. ಅಲ್ಲದೆ ಅಪರಾಧಕ್ಕೆ 50,000 ದಂಡ ಮತ್ತು 3 ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿ ಮಮತ ಹೊಸಗೌಡರ್, ಜಿಲ್ಲಾಸ್ಪತ್ರೆ ಸರ್ಜನ್ ಡಾ. ಜಯಪ್ರಕಾಶ್, ಡಿಹೆಚ್‍ಓ ಡಾ.ನಾಗರಾಜ್, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕಿ ಕೌಸರ್ ರೇಷ್ಮಾ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಸೇರಿದಂತೆ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರು, ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ಆಧಿಕಾರಿಗಳು ಹಾಜರಿದ್ದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *