ದಾವಣಗೆರೆ: ಕೋವಿಡ್ ಲಸಿಕೆ ಹಾಕಿಸಿಕೊಳ್ಳದವರಿಗೆ ಸರ್ಕಾರಿ ಸೌಲಭ್ಯ ಕಡಿತ;  ಡಿಸಿ ಖಡಕ್ ಎಚ್ಚರಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ:  ಕೋವಿಡ್ ಲಸಿಕೆಯನ್ನು ಇದುವರೆಗೂ ಹಾಕಿಸಿಕೊಳ್ಳದ ಆರೋಗ್ಯ ಕ್ಷೇತ್ರ ಹಾಗೂ ಮುಂಚೂಣಿ ಕ್ಷೇತ್ರದ ಫಲಾನುಭವಿಗಳು ಕೂಡಲೇ ಸಂಬಂಧಪಟ್ಟ ಲಸಿಕಾ ಕೇಂದ್ರಕ್ಕೆ ತೆರಳಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು, ತಪ್ಪಿದಲ್ಲಿ ಅಂತಹವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ಲಸಿಕೆ ಕಾರ್ಯಕ್ರಮದ ಪ್ರಗತಿ ಕುರಿತಂತೆ ಆರೋಗ್ಯ ಇಲಾಖೆಯ ಆಯುಕ್ತರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದರು. ಕೋವಿಡ್ ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲಿಸಿದ ಆರೋಗ್ಯ ಇಲಾಖೆ ಆಯುಕ್ತರಾದ ಡಾ. ತ್ರಿಲೋಕಚಂದ್ರ ಅವರು, ಜಿಲ್ಲೆಯ ಪ್ರಗತಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದವರಿಗೆ ನೀಡಲಾದ ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 18920 ಫಲಾನುಭವಿಗಳಿಗೆ ಲಸಿಕೆ ನೀಡುವ ಗುರಿ ಬದಲಿಗೆ ಈವರೆಗೆ 9979 ಜನರು ಲಸಿಕೆ ಹಾಕಿಸಿಕೊಂಡಿದ್ದು, ಶೇ. 52.7 ಸಾಧನೆಯಾಗಿದೆ. ಎರಡನೆ ಹಂತದಲ್ಲಿ ಪೊಲೀಸ್, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿಗೆ ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ ಅವರಿಗೆ ಕೋವಿಡ್ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿತ್ತು.

ಪೊಲೀಸ್ ಇಲಾಖೆಯ 2076 ಜನರಿಗೆ ಕೋವಿಡ್ ಲಸಿಕೆ ನೀಡಿಕೆಯ ಗುರಿಯ ಬದಲಿಗೆ ಕೇವಲ 629 ಜನ ಮಾತ್ರ ಪಡೆದಿದ್ದಾರೆ. ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 3413 ಜನರ ಪೈಕಿ 408. ನಗರಾಭಿವೃದ್ಧಿ ಇಲಾಖೆಯ 1644 ಜನರ ಪೈಕಿ 350 ಜನ ಮಾತ್ರ ಪಡೆದಿದ್ದಾರೆ. ಹೀಗಾಗಿ ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಧನೆ ತೃಪ್ತಿಕರವಾಗಿಲ್ಲ. ಜಿಲ್ಲೆಯ ಕಳಪೆ ಸಾಧನೆಯನ್ನು ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಅಲ್ಲದೆ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಖುದ್ದಾಗಿ ಈಗಾಗಲೆ ಕೋವಿಡ್ ಲಸಿಕೆ ಪಡೆದುಕೊಂಡಿದ್ದು, ಯಾರಿಗೂ ಯಾವುದೇ ಅಡ್ಡಪರಿಣಾಮ ಬೀರಿಲ್ಲ. ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಎರಡೂ ಲಸಿಕೆಗಳು ಉತ್ತಮವಾಗಿದ್ದು, ಕೋವಿಡ್ ಲಸಿಕೆ ಕುರಿತಂತೆ ಯಾರೂ ತಪ್ಪು ಕಲ್ಪನೆ ಹೊಂದಬಾರದು. ಪೂರ್ವಾಗ್ರಹ ಪೀಡಿತರಂತೆ ವರ್ತಿಸಬಾರದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಕೋವಿಡ್ ಲಸಿಕೆಗಾಗಿ ಗುರುತಿಸಲಾಗಿರುವ ಮೊದಲ ಹಾಗೂ ಎರಡನೆ ಹಂತದ ಫಲಾನುಭವಿಗಳು, ಇದುವರೆಗೂ ಲಸಿಕೆ ಪಡೆಯದೇ ಇದ್ದಲ್ಲಿ ಕೂಡಲೆ ಸಂಬಂಧಪಟ್ಟ ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆದುಕೊಳ್ಳಬೇಕು. ಕೋವಿಡ್ ಲಸಿಕೆ ಪಡೆಯದೇ ಇರುವ ಫಲಾನುಭವಿಗಳು ಒಂದು ವೇಳೆ ಕೋವಿಡ್ ಸೋಂಕಿಗೆ ಒಳಗಾದಲ್ಲಿ, ಅಂತಹವರು ತಮ್ಮ ಸ್ವಂತ ಖರ್ಚಿನಿಂದಲೇ ಚಿಕಿತ್ಸಾ ವೆಚ್ಚ ಭರಿಸಬೇಕಾಗುತ್ತದೆ. ಸರ್ಕಾರದಿಂದ ಯಾವುದೇ ಸೌಲಭ್ಯ ನೀಡಲಾಗುವುದಿಲ್ಲ ಎಂಬುದಾಗಿ ಈಗಾಗಲೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಇದುವರೆಗೂ ಕೋವಿಡ್ ಲಸಿಕೆ ಪಡೆಯದೇ ಇರುವವರು ಕೂಡಲೆ ತಂಡೋಪತಂಡವಾಗಿ ಆಯಾ ಲಸಿಕಾ ಕೇಂದ್ರಕ್ಕೆ ತೆರಳಿ, ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಸೂಚನೆ ನೀಡಿದರು.

ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ ಮಾಹಿತಿ ನೀಡಿ, ಆರೋಗ್ಯ ಕ್ಷೇತ್ರ ಕಾರ್ಯಕರ್ತರಾದ ಖಾಸಗಿ ಮತ್ತು ನೋಂದಾಯಿತ ಆರೋಗ್ಯ ಸಿಬ್ಬಂದಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿಗಳು. ಮುಂಚೂಣಿ ಕಾರ್ಯಕರ್ತರಾದ ಪೊಲೀಸ್, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ನಗರಾಭಿವೃದ್ಧಿ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಯಾವುದೇ ಎಸ್‍ಎಂಎಸ್‍ಗೆ ಕಾಯದೆ, ಯಾವುದಾದರೂ ಒಂದು ಗುರುತಿನ ಚೀಟಿ ತೆಗೆದುಕೊಂಡು ಹೋಗಿ ಲಸಿಕೆ ಪಡೆಯಬಹುದು. ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ದಾವಣಗೆರೆ ಹಾಗೂ ಹರಿಹರ, ಜಗಳೂರು, ಹೊನ್ನಾಳಿ, ಚನ್ನಗಿರಿ ತಾಲ್ಲೂಕು ಆಸ್ಪತ್ರೆಗಳನ್ನು ಕೋವಿಡ್-19 ಲಸಿಕಾಕರಣಕ್ಕಾಗಿ ನಿಗದಿಪಡಿಸಲಾಗಿದೆ ಎಂದರು.

ವಿಡಿಯೋ ಸಂವಾದದಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *