ದಾವಣಗೆರೆ: ಜಾತ್ರೆ, ಮದುವೆ, ಹಬ್ಬಗಳು, ಸಮಾರಂಭಗಳು ಮತ್ತು ಇನ್ನಿತರೆ ಧಾರ್ಮಿಕ ಆಚರಣೆ ವೇಳೆ ಸಾರ್ವಜನಿಕರು ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಗದಿಗಿಂತ ಹೆಚ್ಚು ಜನರು ಸೇರಿದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಎಚ್ಚರಿಕೆ ನೀಡಿದರು.
ರಾಜ್ಯಾದ್ಯಂತ ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಮತ್ತು ಅಪರ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳು, ಎಸ್‍ಪಿ ಮತ್ತು ಸಿಇಓ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯ ಬಳಿಕ ಜಿಲ್ಲಾಧಿಕಾರಿಗಳು ಮಾತನಾಡಿದರು.
ಜಾತ್ರೆ, ಮತ್ತಿತರೆ ಜನ ಸೇರುವ ಯಾವುದೇ ಆಚರಣೆಗೆ ಸಕ್ಷಮ ಪ್ರಾಧಿಕಾರದ ಅನುಮತಿ ಕಡ್ಡಾಯವಾಗಿದೆ. ಅನುಮತಿ ಪಡೆಯದೇ ಆಚರಣೆ ಮಾಡಿದಲ್ಲಿ ಕಾನೂನಿನನ್ವಯ ಕ್ರಮ ಕೈಗೊಳ್ಳಲಾಗುವುದು. ಮಾಸ್ಕ್ ಧರಿಸದೇ ಇರುವವರಿಂದ ದಂಡ ವಸೂಲಿ ಮಾಡಲಾಗುವುದು. ಸಾಮಾಜಿಕ ಅಂತರ ಪಾಲನೆ ಮಾಡದೇ, ಕೋವಿಡ್ ಮಾರ್ಗಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಸಾರ್ವಜನಿಕರು ಸರ್ಕಾರದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಚ್ಚರಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿ.ಪಂ. ಸಿಇಒ ವಿಜಯ ಮಹಾಂತೇಶ ಬಿ ದಾನಮ್ಮನವರ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಡಿಹೆಚ್‍ಒ ಡಾ.ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಆರ್.ಎಸ್.ಹೆಚ್ ಅಧಿಕಾರಿ ಡಾ.ಮೀನಾಕ್ಷಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್‍ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.