ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಅಂತ್ಯಕ್ರಿಯೆ ಹುಟ್ಟೂರಾದ ಕುಂದೂರಲ್ಲಿ ನೆಡೆಯಿತು. ಹೊನ್ನಾಳಿ ಮಠದ ಸರ್ಕಲ್‌ನಿಂದ ಅಂತಿಮ ಮೆರವಣಿಗೆ ಆರಂಭವಾಗಿ ಹೊನ್ನಾಳಿ ಪಟ್ಟಣದ ರಾಯಣ್ಣ ವೃತ್ತ, ಟಿಬಿ ಸರ್ಕಲ್ ಮೂಲಕ ಕುಂದೂರು ಗ್ರಾಮದ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಬೆಳಗ್ಗೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವು ಮುಖಂಡರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದರು. ಬಳಿಕ ಮಧ್ಯಾಹ್ನದ ವೇಳೆಗೆ ಪಾರ್ಥಿವ ಶರೀರದ ಅಂತಿಮ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಲಕ್ಷಾಂತರ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು, ಸಾರ್ವಜನಿಕರು ಕಂಬನಿ ಮಿಡಿದರು.
ರೇಣುಕಾಚಾರ್ಯ ಸ್ವಗ್ರಾಮ ಕುಂದೂರಿನಲ್ಲಿರುವ ತೋಟದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಧಾರ್ಮಿಕ ವಿಧಿವಿಧಾನದಲ್ಲಿ ಜಂಗಮ ಗುರುಗಳು ಮುಂದಾಳತ್ವದಲ್ಲಿ ಅಂತ್ಯಸಂಸ್ಕಾರ ನಡೆಯಿತು. ಚಂದ್ರಶೇಖರ್ ಅವರ ಅಜ್ಜ-ಅಜ್ಜಿ ಸಮಾಧಿ ಪಕ್ಕದಲ್ಲಿಯೇ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.



