ದಾವಣಗೆರೆ: ತಡ ರಾತ್ರಿ ನಡು ರಸ್ತೆಯಲ್ಲಿಯೇ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ರೌಡಿಶೀಟರ್ ಹಲ್ಲೆ ಮಾಡಿದ ಘಟನೆ ನಡೆದಿದೆ.
ಬಾಷಾ ನಗರದ ಸಾಮಾಜಿಕ ಕಾರ್ಯಕರ್ತ ಟಿ. ಅಸ್ಗರ್ ಗೆ ರೌಡಿ ಶೀಟರ್ ಖಾಲೀದ್ ಫೈಲ್ವಾನ್ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ನಿನ್ನೆ (ಅ.10) ತಡ ರಾತ್ರಿ ಅಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಷಾ ನಗರದ 5ನೇ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ.
ಟಿ. ಅಸ್ಗರ್ ಮತ್ತು ಖಾಲೀದ್ ಫೈಲ್ವಾನ್ ನಡುವೆ ಕೆಲವು ದಿನಗಳಿಂದ ಜಗಳ ನಡೆಯುತ್ತಿತ್ತು. ಈ ಸಂಬಂಧ ಅಜಾದ್ ನಗರ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿತ್ತು. ಅಸ್ಗರ್ ಅವರು ಭಾಷಾ ನಗರದಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ ವಾಪಸ್ಸು ಬರುವಾಗ ಖಾಲೀದ್ ಫೈಲ್ವಾನ್ ರಸ್ತೆಯಲ್ಲಿಯೇ ಅಡ್ಡಗಟ್ಟಿ, ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾನೆ.
ಕೂಡಲೇ ಆಟೋದಲ್ಲಿ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬಸ್ಥರು ಅವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹಾಗೂ ಆಪ್ತರು ಆಸ್ಪತ್ರೆಯ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.



