ದಾವಣಗೆರೆ: ಕೈಗಾರಿಕಾ ಪ್ರದೇಶಕ್ಕೆ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಂಸದ ಜಿ. ಎಂ ಸಿದ್ದೇಶ್ವರ ಹೇಳಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ವಾಣಿಜ್ಯ ಸಪ್ತಾಹ ಹಾಗೂ ರಫ್ತುದಾರರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕೈಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾಸಭೆಯಲ್ಲಿ ಉದ್ದಯಮಿಗಳು ಕೈಗಾರಿಕಾ ಪ್ರದೇಶ ಮೀಸಲಿಡುವಂತೆ ಮನವಿ ಮಾಡಿದ್ದರು. ಇದೀಗ ಜಿಲ್ಲೆಯಲ್ಲಿ ಜಮೀನು ಗುರುತಿಸಿದ್ದು, ಭೂಸ್ವಾಧೀನ ಪ್ರಕ್ರಿಯೆ ಅತಿ ಶೀಘ್ರದಲ್ಲಿಯೇ ಆರಂಭಿಸಲಾಗುವುದು. ಕೆಐಎಡಿಬಿ ಇಂದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ಬಂಡಾವಳ ಹರಿದು ಬರುವಂತೆ ಮಾಡಲಾಗುವುದು. ಜತೆಗೆ ವಿಮಾನ ನಿಲ್ದಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಶಾಸಕ ಎಸ್ಎ ರವೀಂದ್ರನಾಥ್ ಮಾತನಾಡಿ, ಹಿಂದೆ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಂಗಾ ರಫ್ತು ಆಗುತ್ತಿತ್ತು. ಆದ್ರೀಗ ಶೇಂಗಾ ಬೆಳೆಗಾರೇ ಇಲ್ಲವಾಗಿದೆ. ಹೀಗಾಗಿ ಈ ಉದ್ಯಮವನ್ನು ಮತ್ತೆ ಬೆಳಸಬೇಕಿದೆ ಎಂದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಜಿಲ್ಲೆಯಲ್ಲಿ ಅಡಿಕೆ ಬೆಳೆಯ ಪ್ರದೇಶ ದಿನದಿಂದ ದಿನಕ್ಕೆ ಹೆಚ್ಚಳವಾಗಿದೆ. ರೈತರು ವಾಣಿಜ್ಯ ಬೆಳೆ ಜೊತೆ ಉತ್ತಮ ಆರೋಗ್ಯಕ್ಕಾಗಿ ಸಿರಿಧಾನ್ಯಗಳನ್ನು ಬೆಳೆಯುವತ್ತಲೂಗಮನಹರಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ದೇವರಮನೆ ಶಿವಕುಮಾರ್, ಮೇಯರ್ ವೀರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷಂತ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಜಯಪ್ರಕಾಶ್ ನಾರಾಯಣ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



