ದಾವಣಗೆರೆ: ಪ್ರಸಕ್ತ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲು ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಸೆ.10 ರವರೆಗೆ ವಿಸ್ತರಿಸಲಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಮ ಮತ್ತು ಅತಿ ಸೂಕ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳಲ್ಲಿ ಸ್ವಯಂ ಉದ್ಯೋಗ ಕಾರ್ಯಕ್ರಮದಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ ಹಾಗೂ ಪ್ರೇರಣಾ (ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘದವರಿಗೆ) ಮತ್ತು ಭೂ ಒಡೆತನ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಫಲಾಪೇಕ್ಷಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಮತ್ತು ದಾಖಲೆಗಳನ್ನು ನಿಗಮದ ವೆಬ್‍ಸೈಟ್ www.adcl.karnataka.gov.in ಮೂಲಕ ಸೆ. 10 ರವರೆಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



