ದಾವಣಗೆರೆ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಂದ ಪ್ರಯೋಜನ ಪಡೆದ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ವರ್ಚುಯಲ್ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದಲ್ಲಿ ನೇರಪ್ರಸಾರ ಏರ್ಪಡಿಸಲಾಗಿತ್ತು.
ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ಪಡೆದ ಫಲಾನುಭವಿಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಯೋಜನೆಗಳಿಂದ ತಮಗಾಗಿರುವ ಪ್ರಯೋಜನಗಳನ್ನು ಹಂಚಿಕೊಂಡರು. ರಾಜ್ಯದ ಕಲ್ಬುರ್ಗಿ ಜಿಲ್ಲೆಯ ಮಹಿಳಾ ಫಲಾನುಭವಿ ಸಂತೋಶಿ ಮಾತನಾಡಿ, ತಮ್ಮೊಂದಿಗೆ ಮಾತನಾಡಲು ಅವಕಾಶ ಸಿಕ್ಕಿರುವುದು ಬಹಳ ಆನಂದವಾಗಿದೆ. ನಮ್ಮ ತಾಯಿಯವರು ಬಿ.ಪಿ ಮತ್ತು ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದರು, ಅವರಿಗೆ ಚಿಕಿತ್ಸೆ ಕೊಡಿಸಲು ಖಾಸಗಿ ಆಸ್ಪತ್ರೆಯಲ್ಲಿ ಸಾವಿರಾರು ರೂ ಖರ್ಚಾಗುತ್ತಿತ್ತು ಆದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಆರೋಗ್ಯ ಯೋಜನೆಯ ಹೆಲ್ತ್ ಕಾರ್ಡ್ ಮೂಲಕ ತಾಯಿಯು ಉಚಿತ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಈ ಆಯುಷ್ಮಾನ್ ಆರೋಗ್ಯ ಯೋಜನೆಯಿಂದ ನಮ್ಮ ಕುಟುಂಬಕ್ಕೆ ತುಂಬಾ ಅನುಕೂಲವಾಗಿದೆ ಎಂದರು.
ಹಿಮಾಚಲ ಪ್ರದೇಶದ ಶಿಮ್ಲಾದಿಂದ ವರ್ಚುಯಲ್ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಡವರ ಕಲ್ಯಾಣಕ್ಕಾಗಿಯೇ ನಾವು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, 08 ವರ್ಷಗಳ ನಮ್ಮ ಆಡಳಿತದಲ್ಲಿ ನಾನು ಪ್ರಧಾನ ಸೇವಕನಾಗಿ ಕಾರ್ಯ ನಿರ್ವಹಿಸಿ ದೇಶದ 130 ಕೋಟಿ ಜನರ ಪರಿವಾರದ ಸದಸ್ಯನಾಗಿದ್ದೇನೆ. ನಾವೆಲ್ಲರೂ ಜೊತೆಗೂಡಿ ಭಾರತವನ್ನು ಇಡೀ ವಿಶ್ವದಲ್ಲಿ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಪ್ರಯತ್ನಿಸೋಣ. ಇಂದು ದೇಶದ 10 ಕೋಟಿಗೂ ಹೆಚ್ಚಿನ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದ್ದು ಇಡೀ ರಾಷ್ಟ್ರದ ಜನ ಈ ಗರೀಬ್ ಕಲ್ಯಾಣ್ ಸಮ್ಮೇಳನದಲ್ಲಿ ಭಾಗವಹಿಸಿ ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಭ್ರಷ್ಟಾಚಾರ ತೊಲಗಿಸುವ ಉದ್ದೇಶದಿಂದ ವಿವಿಧ ಯೋಜನಗಳ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗೆ ಹಣ ಪಾವತಿಸುವ ಪ್ರಕ್ರಿಯೆ ಜಾರಿಗೆ ತರಲಾಗಿದೆ. ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಸ್ಥಳಿಯ ಭಾಷೆಯಲ್ಲಿ ಶಿಕ್ಷಣ ನೀಡುವ ಮೂಲಕ ಇಂಗ್ಲೀಷ್ ದಾಸ್ಯದಿಂದ ಹೊರ ಬರಲು ಉತ್ತೇಜನ ನೀಡಲಾಗುತ್ತಿದೆ. ಕೊವೀಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯ ಮೂಲಕ ವಿವಿಧ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ್(ಬೈರತಿ), ಸಂಸದ ಡಾ.ಜಿ.ಎಂ ಸಿದ್ದೇಶ್ವರ, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಪೆÇ್ರ.ಲಿಂಗಣ್ಣ, ಮಾಜಿ ವಿಧಾನ ಪರಿಷತ್ ಸದಸ್ಯ ಎ.ಹೆಚ್ ಶಿವಯೋಗಿಸ್ವಾಮಿ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೆÇಲೀಸ್ ವರರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎ.ಚನ್ನಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದು ವರ್ಚುಯಲ್ ಕಾರ್ಯಕ್ರಮವನ್ನು ವೀಕ್ಷಿಸಿದರು.