ದಾವಣಗೆರೆ: ಜಿಲ್ಲೆಯಲ್ಲಿ ಜೂ.16 ಮತ್ತು 17 ರಂದು ಪಿಯುಸಿ ವಿದ್ಯಾರ್ಥಿಗಳಿಗೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಮುಂಜಾಗ್ರತೆ ವಹಿಸಿ ಸುಗಮವಾಗಿ ಪರೀಕ್ಷೆಗಳನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಜಿಲ್ಲಾಡಳಿತ ಭವನದ ಅಪರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಕುರಿತು ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ದಾವಣಗೆರೆ ನಗರದ 19 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 9168 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಮತ್ತು ಪರೀಕ್ಷೆಯ ಅವಧಿಯಲ್ಲಿ ಕೇಂದ್ರಗಳ ಸುತ್ತ ಮುತ್ತಲಿರುವ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆಗಳಿಗೆ ತೆರೆಯಲು ಅವಕಾಶ ಇರುವುದಿಲ್ಲ. ಪರೀಕ್ಷಾರ್ಥಿಗಳು ಹಾಗೂ ಮೇಲ್ವಿಚಾರಕರ ಮೊಬೈಲ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತು ಪಡಿಸಿ ಪರೀಕ್ಷಾ ಕೇಂದ್ರದೊಳಗೆ ಅನ್ಯ ವ್ಯಕ್ತಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಜಿಲ್ಲೆಯಲ್ಲಿ ಈ ಹಿಂದೆ ಅನೇಕ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ, ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು ಯಾವುದೇ ರೀತಿಯ ಅಕ್ರಮ, ಲೋಪ ಬರದಂತೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಭೂಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಕೌಸರ್ ರೇಷ್ಮಾ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್ ಸುಂಕದ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.



