ದಾವಣಗೆರೆ: ಮಳೆಯಿಂದ ಹಾನಿಗೊಳಗಾದ ಎಲ್ಲಾ ಸಂತ್ರಸ್ತರಿಗೂ ಮಾರ್ಗಸೂಚಿ ಅನ್ವಯ ಪರಿಹಾರ ಮಂಜೂರು ಮಾಡಬೇಕು. ದಾಖಲಾತಿಗಳ ಸಬೂಬು ಹೇಳಿ ಯಾವುದೇ ಸಂತ್ರಸ್ತರು ಪರಿಹಾರದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಪರಿಹಾರ ಮತ್ತು ಕೋವಿಡ್ ಸ್ಥಿತಿಗತಿಗಳ ಪರಿಶೀಲನೆ ಕುರಿತು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಮನೆಗಳು ಹಾನಿಗೊಳಗಾಗಿದ್ದು ಅನೇಕರು ಮನೆಗಳನ್ನು ಕಳೆದುಕೊಂಡಿದ್ದಾರೆ, ಅಂತಹ ಸಂತ್ರಸ್ತರನ್ನು ಗುರುತಿಸಿ ಸರ್ಕಾರದ ಮಾರ್ಗಸೂಚಿಯಂತೆ ಇನ್ನೊಂದು ವಾರದಲ್ಲಿ ಸೂಕ್ತ ಪರಿಹಾರವನ್ನು ಮಂಜೂರು ಮಾಡಬೇಕು. ಪರಿಹಾರ ಮಂಜೂರು ಮಾಡುವಲ್ಲಿ ನಿರ್ಲಕ್ಷ್ಯ ತೋರದೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ, ಇಲ್ಲವಾದಲ್ಲಿ ಅಧಿಕಾರಿಗಳ ಮೇಲೆ ಯಾವುದೇ ಮುಲ್ಲಾಜಿಲ್ಲದೇ ಕ್ರಮ ಜರುಗಿಸಲಾಗುವುದು. ಹಾನಿಗೊಳಗಾದ ಮನೆಗಳನ್ನು ಖುದ್ದಾಗಿ ಸ್ಥಳೀಯ ಪಿಡಿಒ ಮತ್ತು ತಹಶೀಲ್ದಾರರು ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.
ಇನ್ನು ಎರಡು ತಿಂಗಳಿಗೂ ಹೆಚ್ಚುಕಾಲ ಮಳೆಗಾಲವಿದ್ದು ಕಟಾವಿಗೆ ಬಂದಿರುವ ಬೆಳೆಗಳನ್ನು ಉಳಿಸಿಕೊಳ್ಳಲು ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. 956 ಎಕರೆ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು ಅರ್ಹ ರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಬೆಳೆ ಹಾನಿಯಾದ ರೈತರಿಗೆ ಕೃಷಿ ಇಲಾಖೆಯವರು ಯಾವುದೇ ಅನ್ಯಾಯವಾಗದಂತೆ ಪರಿಹಾರ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ವಿಶೇಷವಾಗಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಮಳೆಯಿಂದ ಹಾನಿಗೊಳಗಾದ ಬೆಳೆಗಳ ಸರ್ವೇ ನಡೆಸಿ ವರದಿ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒತ್ತುವರಿ ಮಾಡಿಕೊಂಡಿರುವ ಚರಂಡಿ, ರಾಜಕಾಲುವೆಗಳನ್ನು ತೆರವುಗೊಳಿಸಬೇಕು ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಂಡ ಬಸ್ ಸ್ಟ್ಯಾಂಡ್, ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಏಪ್ರೀಲ್ ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮಾತನಾಡಿ, ಕಳೆದ ಹತ್ತು ದಿನಗಳಿಂದ ಜಿಲ್ಲೆಯಲ್ಲಿ ಇನ್ನೂರು ಪಟ್ಟು ಜಾಸ್ತಿ ಮಳೆಯಾಗಿದೆ. 140 ಮಿಲೀ.ಮೀ ಹೆಚ್ಚು ಮಳೆಯಾಗಿದೆ, ಸರ್ಕಾರದ ನಿರ್ದೇಶನದಂತೆ ಪರಿಹಾರ ನೀಡಲಾಗುತ್ತಿದೆ ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ಮಾತನಾಡಿ, ಜಿಲ್ಲೆಯಾದ್ಯಂತ ಒಟ್ಟು 13,608 ಹೆಕ್ಟೇರ್ ಬೆಳೆಹಾನಿಯಾಗಿದ್ದು ಪರಿಹಾರ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ತೋಟಗಾರಿಕೆ ಇಲಾಖೆಯ ಅಧಿಕಾರಿ ರಾಘವೇಂದ್ರ ಮಾಹಿತಿ ನೀಡಿ, 956 ಎಕರೆ ತೋಟಗಾರಿಕೆ ಬೆಳೆ ಹಾನಿಯಾಗಿದೆ, ಹೊಸದಾಗಿ 27.32 ಎಕರೆ ಬೆಳೆಹಾನಿ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷೆ ಪೂರ್ಣಗೊಂಡ ನಂತರ ವರದಿ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಚನ್ನಗಿರಿ ತಹಶೀಲ್ದಾರ್ ಪಟ್ಟರಾಜು ಗೌಡ ಮಾತನಾಡಿ, ಒಟ್ಟಾರೆ ಚನ್ನಗಿರಿ ತಾಲ್ಲೂಕಿನಲ್ಲಿ 599 ಮನೆಗಳು ಮಳೆಯಿಂದ ಹಾನಿಗೊಳಗಾಗಿದ್ದು, ಅದರಲ್ಲಿ 540 ಮನೆಗಳಿಗೆ ಪರಿಹಾರ ಮಂಜೂರಾತಿ ಬಾಕಿ ಇದೆ. ರುದ್ರಾಪುರ ಗ್ರಾಮದಲ್ಲಿ ಸಂತ್ರಸ್ತರಿಗಾಗಿ ಕಾಳಜಿ ಕೇಂದ್ರ ತೆರೆಯಲಾಗಿದ್ದು ಸರ್ಕಾರದ ಮೆನು ಪ್ರಕಾರ ಆಹಾರ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ದಾವಣಗೆರೆ ತಹಶೀಲ್ದಾರ್ ಬಸವನಗೌಡ ಕೋಟೂರ ಮಾತನಾಡಿ, ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಒಟ್ಟು 168 ಮನೆಗಳಿಗೆ ಹಾನಿಯಾಗಿದ್ದು, ಇವುಗಳಲ್ಲಿ ಎ.ಬಿ.ಸಿ ವರ್ಗವಾರು 131 ಮನೆಗಳಿಗೆ ಪರಿಹಾರ ಮಂಜೂರು ಮಾಡಲಾಗಿದ್ದು, 37 ಮನೆಗಳಿಗೆ ಒದಗಿಸಬೇಕಾಗಿದೆ ಎಂದರು.
ಹರಿಹರ ತಹಶೀಲ್ದಾರ್ ಡಾ.ಎಂ.ಬಿ ಅಶ್ವಥ್ ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 106 ಮನೆಗಳು ಹಾನಿಗೊಳಗಾಗಿದ್ದವು ಅವುಗಳಲ್ಲಿ 103 ಮನೆಗಳಿಗೆ ಪರಿಹಾರ ಒದಗಿಸಲಾಗಿದ್ದು, 03 ಮನೆಗಳಿಗೆ ಪರಿಹಾರ ಒದಗಿಸುವ ಕಾರ್ಯ ಬಾಕಿ ಉಳಿದಿದೆ ಎಂದರು.
ಜಗಳೂರು ತಹಶೀಲ್ದಾರ್ ಸಂತೋಷ ಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ ಹಾನಿಗೊಳಗಾಗಿದ್ದ ಎಲ್ಲಾ 48 ಮನೆಗಳಿಗೂ ಪರಿಹಾರ ಒದಗಿಸುವ ಕಾರ್ಯ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು. ಕೋವಿಡ್ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ನಾಗರಾಜ್ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗಿದ್ದು ಒಟ್ಟು 32 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಅವುಗಳಲ್ಲಿ 14 ಸೋಂಕಿತ ಪ್ರಕರಣಗಳು ಗುಣಮುಖರಾಗಿವೆ, ಇನ್ನು 18 ಪ್ರಕರಣಗಳು ಸಕ್ರಿಯವಾಗಿವೆ. ಬೂಸ್ಟರ್ ಡೋಸ್ ಲಸಿಕೆ ನೀಡುವ ಕಾರ್ಯ ಶೇ.17 ರಷ್ಟು ಪೂರ್ಣಗೊಂಡಿದೆ. ಪ್ರತಿ ಮನೆ-ಮನೆಗೆ ಹೋಗಿ ಲಸಿಕೆ ನೀಡಲಾಗುತ್ತಿದೆ ಎಂದರು.
ನದಿ ಪಾತ್ರದ ಜನರಿಗೆ ಶಾಶ್ವತ ಸೂರು ಒದಗಿಸಿ ; ಹರಿಹರದ ಗಂಗಾ ನಗರ ಹಾಗೂ ಹೊನ್ನಾಳಿ ಪಟ್ಟಣದ ಬಾಲರಾಜ್ ಘಾಟ್ ಬಳಿ ಪ್ರತಿ ಬಾರಿ ಹೊಳೆ ನೀರು ಆ ಪ್ರದೇಶದ ಮನೆಗಳಿಗೆ ನುಗ್ಗುತ್ತಿದೆ, ಅಲ್ಲಿಯ ನಿವಾಸಿಗಳಿಗೆ ಲಭ್ಯವಿರುವ ಕಡೆ ತಕ್ಷಣ ಜಾಗ ಗುರುತಿಸಿ ನಿವೇಶನ ನೀಡಿ ಮನೆ ಕಟ್ಟಿಕೊಳ್ಳಲು ಕ್ರಮವಹಿಸಿ. ಎಷ್ಟು ದಿನ ಹೀಗೆಯೇ ಪರಿಹಾರ ಕೊಟ್ಟು ಕೂರುತ್ತೀರಿ ಈ ಸಮಸ್ಯೆ ಇಲ್ಲಿಗೇ ಮುಗಿಯಬೇಕು. ಮುಂದಿನ ಸಭೆಯೊಳಗೆ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಬೇಕೆಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ್ ಮುದ್ದಜ್ಜಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಉಪವಿಭಾಗಾಧಿಕಾರಿಗಳಾದ ದುರ್ಗಾಶ್ರೀ, ಹುಲ್ಲುಮನಿ ತಿಮ್ಮಣ್ಣ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.