ದಾವಣಗೆರೆ: ಹಿರಿಯ ನಾಗರಿಕರಿಗೆ ಎಷ್ಟೇ ಸಮಸ್ಯೆಗಳಿದ್ದರೂ, ಒಬ್ಬರಿಗೊಬ್ಬರು ಪರಸ್ಪರ ಸಹಾಯ ಮಾಡುತ್ತಾ ಸಹಬಾಳ್ವೆಯಿಂದ ಬದುಕುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.
ಶನಿವಾರ ನಗರದ ಎಂಸಿಸಿ ಬಿ ಬ್ಲಾಕ್‍ನಲ್ಲಿರುವ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳ ಮಠದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಾವಣಗೆರೆ ಜಿಲ್ಲಾ ಹಿರಿಯ ನಾಗರಿಕರ ಸಂಘ ಹಾಗೂ ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ದಿನಮಾನಗಳಲ್ಲಿ ಹಿರಿಯ ನಾಗರಿಕರು ಕೌಟುಂಬಿಕವಾಗಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಕ್ಕಳು ವಿದೇಶದಲ್ಲಿ ವಾಸವಾಗಿರುತ್ತಾರೆ, ಆದರೆ ತಂದೆ ತಾಯಿಗಳು ಇಲ್ಲಿಯೇ ಜೀವನ ಸಾಗಿಸುತ್ತಿರುತ್ತಾರೆ. ಅನೇಕ ಹಿರಿಯರಿಗೆ ನಗರ ಜೀವನ ತೃಪ್ತಿ ನೀಡುವುದಿಲ್ಲ. ಅವರು ಗ್ರಾಮೀಣ ಪ್ರದೇಶದಲ್ಲಿ ವಾಸಿಸಲು ಇಷ್ಟಪಡುತ್ತಾರೆ. ಆದರೆ ಅನಿವಾರ್ಯವಾಗಿ ನಗರ ಜೀವನಕ್ಕೆ ಹೊಂದಿಕೊಳ್ಳಬೇಕಾಗುತ್ತದೆ ಎಂದರು.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಮಾತನಾಡಿ, ಕೌಟುಂಬಿಕವಾಗಿ ಕಿರಿಯರಿಗೆ, ಹಿರಿಯರ ಮಾರ್ಗದರ್ಶನ ಅತಿ ಮುಖ್ಯ. ಹಿರಿಯ ನಾಗರಿಕರು ವೃದ್ಧಾಪ್ಯದ ದಿನಗಳಲ್ಲಿ ಕುಟುಂಬದ ಸದಸ್ಯರೊಂದಿಗೆ ಬೆರೆತುಕೊಂಡು ಸಂತೋಷದಿಂದ ಇರಬೇಕು. ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಅವರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಲೀಲಾಜಿ ಮಾತನಾಡಿ, ಹಿರಿಯ ನಾಗರಿಕರು ಮನಸ್ಸಿನ ಆರೋಗ್ಯವನ್ನು ಕಾಪಾಡಿಕೊಂಡರೆ ದೇಹದ ಆರೋಗ್ಯ ಉತ್ತಮವಾಗಿರುತ್ತದೆ. ಬದುಕಿಗೆ ಶಾಂತಿ ಮತ್ತು ಸಹನೆ ಮುಖ್ಯ, ವೃದ್ಧಾಪ್ಯದ ದಿನಗಳಲ್ಲಿ ಹಿರಿಯರು ಹಠದ ಮನೋಭಾವನೆ ಬಿಟ್ಟು ಎಲ್ಲರೊಂದಿಗೆ ಹೊಂದಾಣಿಕೆಯಿಂದಿರಬೇಕು. ಮುಂದಿನ ದಿನಗಳಲ್ಲಿ ಯುವ ಸಮೂಹವನ್ನು ಒಳಗೊಂಡಂತೆ ಸಮಾಜದ ವಿವಿಧ ಸ್ತರಗಳ ಜನರನ್ನು ಸೇರಿಸಿ ಹಿರಿಯ ನಾಗರಿಕರ ದಿನಾಚರಣೆಯನ್ನು ಆಯೋಜಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಡಾ.ಕೆ.ಕೆ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ 89,752 ಹಿರಿಯ ನಾಗರಿಕರು ಸಂಧ್ಯಾ ಸುರಕ್ಷಾ ಯೋಜನೆಯಡಿ ಹಾಗೂ 63,053 ಜನ ಹಿರಿಯ ನಾಗರಿಕರು ವೃದ್ಧಾಪ್ಯ ವೇತನ ಪಡೆಯುತ್ತಿದ್ದಾರೆ. 3 ವೃದ್ದಾಶ್ರಮಗಳು ಕಾರ್ಯನಿರ್ವಹಿಸುತ್ತಿದ್ದು, ಹಿರಿಯ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದರು.
ಇದೇ ವೇಳೆ ಹಿರಿಯ ನಾಗರಿಕರಿಗೆ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ. ಶಂಕರ್ ಗೌಡ, ಹಿರಿಯ ನಾಗರಿಕರ ಸಂಘದ ಗುರುಮೂರ್ತಿ, ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಹಿರಿಯ ನಾಗರಿಕರು ಭಾಗವಹಿಸಿದರು.