Connect with us

Dvgsuddi Kannada | online news portal | Kannada news online

ದಾವಣಗೆರೆ: ಬೆಂಬಲ ಬೆಲೆಯಲ್ಲಿ ಭತ್ತ, ಶೇಂಗಾ ಖರೀದಿಗೆ ಜಿಲ್ಲಾಡಳಿತ ಸಿದ್ಧತೆ; ದರ ಎಷ್ಟು ಗೊತ್ತಾ..?

ದಾವಣಗೆರೆ

ದಾವಣಗೆರೆ: ಬೆಂಬಲ ಬೆಲೆಯಲ್ಲಿ ಭತ್ತ, ಶೇಂಗಾ ಖರೀದಿಗೆ ಜಿಲ್ಲಾಡಳಿತ ಸಿದ್ಧತೆ; ದರ ಎಷ್ಟು ಗೊತ್ತಾ..?

ಡಿವಿಜಿ ಸುದ್ದಿ, ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಸರ್ಕಾರ ಆದೇಶ ನೀಡಿದ್ದು, ರೈತರು ಮತ್ತು ಅಕ್ಕಿ ಗಿರಣಿಗಳ ನೊಂದಣಿ ಹಾಗೂ ಖರೀದಿ ಕೇಂದ್ರ ಪ್ರಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಬಲ ಬೆಲೆಯಲ್ಲಿ ಭತ್ತ ಹಾಗೂ ಶೇಂಗಾ ಖರೀದಿಸುವ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

  • ಭತ್ತದ ದರ
  • ಸಾಮಾನ್ಯ ಭತ್ತ- 1868
  • ಎ ಗ್ರೇಡ್ ಭತ್ತ -1888

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ ಭತ್ತವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸರ್ಕಾರ ಆದೇಶ ನೀಡಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‍ ಗೆ ರೂ. 1868 ಹಾಗೂ ಗ್ರೇಡ್-ಎ ಭತ್ತಕ್ಕೆ 1888 ರೂ. ಬೆಂಬಲ ಬೆಲೆ ಘೋಷಿಸಲಾಗಿದೆ. ಸಾಮಾನ್ಯ ಭತ್ತ ಪ್ರತಿ ರೈತರಿಂದ ಗರಿಷ್ಟ 40 ಕ್ವಿಂಟಾಲ್‍. (ಪ್ರತಿ ಎಕರೆಗೆ 16 ಕ್ವಿಂಟಾಲ್‍ ನಂತೆ) ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಲು ದಾವಣಗೆರೆ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಸಂಗ್ರಹಣಾ ಏಜೆನ್ಸಿಯಾಗಿ ನೇಮಿಸಲಾಗಿದೆ.

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ನೊಂದಣಿ ಮಾಡಿದಂತಹ ರೈತರಿಂದ ಭತ್ತವನ್ನು, ನಿಗದಿತ ಅಕ್ಕಿ ಗಿರಣಿಗಳ ಮೂಲಕ ನೇರವಾಗಿ ಪಡೆದುಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಸದ್ಯ ಮಾರುಕಟ್ಟೆಯಲ್ಲಿ ಭತ್ತಕ್ಕೆ ಬೆಂಬಲ ಬೆಲೆಗಿಂತಲೂ ಕಡಿಮೆ ದರ ಇದೆ. ಹೀಗಾಗಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭ ಮಾಡುತ್ತಿರುವುದು ರೈತರಿಗೆ ಅನುಕೂಲವಾಗಲಿದೆ.

ಭತ್ತ ಮಾರಾಟ ಮಾಡಬಯಸುವ ರೈತರು ಕೃಷಿ ಇಲಾಖೆ ಜಾರಿಗೊಳಿಸಿರುವ ಫ್ರೂಟ್ಸ್ ದತ್ತಾಂಶದಲ್ಲಿ ತಮ್ಮ ಹೆಸರು ನೊಂದಣಿ ಮಾಡಿಸಿರಬೇಕು. ಫ್ರೂಟ್ಸ್ ದತ್ತಾಂಶದಲ್ಲಿ ನೊಂದಣಿ ಆಗಿರದ ರೈತರಿಂದ ಭತ್ತ ಖರೀದಿಗೆ ಅವಕಾಶವಿಲ್ಲ. ಇದುವರೆಗೂ ನೊಂದಣಿ ಮಾಡಿಸದೇ ಇರುವ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ನೊಂದಣಿ ಮಾಡಿಸಲು ಅವಕಾಶವಿದೆ.

dc

ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಕಾರ್ಯನಿರತವಾಗಿರುವ ಅಕ್ಕಿ ಗಿರಣಿಗಳನ್ನು ಭತ್ತ ಖರೀದಿ ಕಾರ್ಯಕ್ಕೆ ನೊಂದಾಯಿಸಿಕೊಳ್ಳಬೇಕಿದ್ದು, ನ. 20 ರಿಂದ 25 ರವರೆಗೆ ನೊಂದಣಿ ಮಾಡಿಕೊಳ್ಳಬೇಕು. ಭತ್ತ ಗುಣಮಟ್ಟ ಪರಿಶೀಲನೆಗೆ ಕೃಷಿ ಇಲಾಖೆ ಗ್ರೇಡರ್‍ಗಳನ್ನು ನಿಯೋಜಿಸಿ, ಇವರಿಗೆ ಸೂಕ್ತ ತರಬೇತಿ ನೀಡಬೇಕು. ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ರೈತರ ನೊಂದಣಿ ಕಾರ್ಯ ನ. 30 ರಿಂದ ಡಿ. 30 ರವರೆಗೆ ನಡೆಯಲಿದೆ. ಭತ್ತ ಮಾರಾಟ ಮಾಡುವ ರೈತರಿಗೆ 03 ದಿನಗಳ ಒಳಗಾಗಿ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

16 ಹೋಬಳಿ ಕೇಂದ್ರಗಳಲ್ಲಿ ಖರೀದಿ ಕೇಂದ್ರ :ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸುವ ಸಲುವಾಗಿ ಕಳೆದ ಬಾರಿ ತಾಲ್ಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಲಾಗಿತ್ತು. ಆದರೆ ಈ ಬಾರಿ ಜಗಳೂರು ತಾಲ್ಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳ ಒಟ್ಟು 16 ಹೋಬಳಿ ಕೇಂದ್ರಗಳಲ್ಲಿಯೂ ಭತ್ತ ಖರೀದಿ ಕೇಂದ್ರ ತೆರೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಸಿಬ್ಬಂದಿ ಕೊರತೆಯಾದಲ್ಲಿ ಜಿಲ್ಲಾಡಳಿತದ ವತಿಯಿಂದಲೇ ಸಿಬ್ಬಂದಿ ನಿಯೋಜಿಸಲಾಗುವುದು. ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸುವ ಕುರಿತು ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಆಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿನಿರ್ದೇಶಕ ಮಂಟೇಸ್ವಾಮಿ ಮಾತನಾಡಿ, ಸದ್ಯ ಭತ್ತಕ್ಕೆ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆ ಇದೆ. ಫ್ರೂಟ್ಸ್ ದತ್ತಾಂಶ ವ್ಯವಸ್ಥೆ ಪ್ರಾರಂಭವಾದಾಗಿನಿಂದ, ರೈತರಿಗೆ ತ್ವರಿತವಾಗಿ ಹಣ ಪಾವತಿ ಆಗುತ್ತಿದೆ. ಕಳೆದ ಬಾರಿ ಬೆಂಬಲ ಬೆಲೆ ಯೋಜನೆಯಡಿ ಸುಮಾರು 40 ಸಾವಿರ ಕ್ವಿಂಟಲ್ ನಷ್ಟು ಭತ್ತ ಖರೀದಿ ಆಗಿತ್ತು. ಎಲ್ಲ ರೈತರಿಗೂ ಹಣ ಪಾವತಿಯಾಗಿದೆ ಎಂದರು.

ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್  ಮಾತನಾಡಿ, ಈ ಬಾರಿ ಜಿಲ್ಲೆಯ 66450 ಹೆ. ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಸುಮಾರು 3.30 ಲಕ್ಷ ಟನ್ ಭತ್ತ ಉತ್ಪಾದನೆಯಾಗುವ ನಿರೀಕ್ಷೆ ಇದೆ. ಸದ್ಯ ಜಿಲ್ಲೆಯಲ್ಲಿ ಭತ್ತ ಕಟಾವು ಪ್ರಕ್ರಿಯೆ ಆರಂಭವಾಗಿದೆ. ರೈತರು ತರುವ ಭತ್ತದ ಮಾದರಿ ಗುಣಮಟ್ಟ ಪರಿಶೀಲನೆಗೆ ಖರೀದಿ ಕೇಂದ್ರಕ್ಕೆ ಕೃಷಿ ಇಲಾಖೆಯಿಂದ ಗ್ರೇಡರ್‍ಗಳನ್ನು ನಿಯೋಜಿಸಲಾಗುವುದು ಎಂದರು.

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ : ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಸಲು ಸರ್ಕಾರ ಸೂಚನೆ ನೀಡಿದ್ದು, ಜಿಲ್ಲೆಯ ಜಗಳೂರಿನಲ್ಲಿ ಶೇಂಗಾ ಖರೀದಿ ಕೇಂದ್ರ ಪ್ರಾರಂಭ ಮಾಡಲಾಗುವುದು. ಶೇಂಗಾ ಬೆಳೆಗೆ ಪ್ರತಿ ಕ್ವಿಂಟಾಲ್‍ಗೆ 5275 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಪ್ರತಿ ಎಕರೆಗೆ 03 ಕ್ವಿಂ. ನಂತೆ ಪ್ರತಿ ರೈತರಿಂದ ಗರಿಷ್ಟ 15 ಕ್ವಿಂ. ಶೇಂಗಾ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ರೈತರ ನೊಂದಣಿ ಕಾರ್ಯ ಆರಂಭವಾಗಿದ್ದು, ನೊಂದಣಿ ಮಾಡಿಸಲು ನ. 21 ಕೊನೆಯ ದಿನವಾಗಿದೆ.

ಫ್ರೂಟ್ಸ್ ದತ್ತಾಂಶದಲ್ಲಿ ನೊಂದಣಿಯಾಗಿರುವ ರೈತರಿಂದ ಮಾತ್ರ ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಸಲಾಗುವುದು. ಶೇಂಗಾ ಖರೀದಿಗೆ ಜಿಲ್ಲೆಯಲ್ಲಿ ಕೆಒಎಫ್ ಅನ್ನು ಖರೀದಿ ಏಜೆನ್ಸಿಯಾಗಿ ನಿಗದಿಪಡಿಸಲಾಗಿದ್ದು, ಜಿಲ್ಲೆಯಲ್ಲಿ ಶೇಂಗಾ ಖರೀದಿ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ನಿರ್ದೇಶನ ನೀಡಿದರು. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿನಿರ್ದೇಶಕ ಮಂಟೆಸ್ವಾಮಿ, ಜಂಟಿಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಕೆಒಎಫ್ ವ್ಯವಸ್ಥಾಪಕ ಹನುಮಂತ ನಾಯಕ್ ಸೇರಿದಂತೆ ಕೃಷಿ ಮಾರಾಟ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top
(adsbygoogle = window.adsbygoogle || []).push({});