ದಾವಣಗೆರೆ: ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳನ್ನು ಮಾರಾಟ ಮಾಡತಕ್ಕದ್ದಲ್ಲ. ಹಸಿರು ಪಟಾಕಿಗಳನ್ನು ಅಧಿಕೃತವಾಗಿ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಮಾರಾಟ ಮಾಡತಕ್ಕದ್ದು. ಮಾರಾಟಗಾರರು ಪರವಾನಿಗೆ ಪ್ರತಿಯನ್ನು ಸಾರ್ವಜನಿಕರಿಗೆ ಕಾಣಣುವಂತೆ ಪ್ರದರ್ಶಿಸಬೇಕು. ಪರವಾನಗಿ ಪತ್ರವನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ದೀಪಾವಳಿ ಹಬ್ಬದ ಸಂಬಂಧ ನರಕಚತುರ್ದಶಿ-ನ.03ನೇ ತಾರೀಖು, ದೀಪಾವಳಿ ಅಮಾವಸ್ಯೆ ನ.4ನೇ ತಾರೀಖು ಬಲಿಪಾಡ್ಯಮಿ-ನ.5 ನೇ ತಾರೀಖು ನವಂಬರ್-2021ರ ಹಬ್ಬದ ಸಮಯದಲ್ಲಿ ಪಟಾಕಿಗಳನ್ನು ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸುವುದು ಮತ್ತು ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡಿರುವುದರಿಂದ ಈ ಹಬ್ಬವನ್ನು ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಆಚರಿಸಬೇಕು.
ಹಸಿರು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸತಕ್ಕದ್ದು. ಹಸಿರು ಪಟಾಕಿಗಳ ಖರೀದಿಯ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳತಕ್ಕದ್ದು.
ಕೋವಿಡ್-19 ಸಾಂಕ್ರಾಮಿಕ ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಈ ಸೊಂಕಿನ ಸರಪಳಿಯನ್ನು ಕತ್ತರಿಸಲು ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುತ್ತದೆ.
ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ ದೀಪಾವಳಿ ಹಬ್ಬವನ್ನು ಸರಳವಾಗಿ ಅರ್ಥಗರ್ಭಿತವಾಗಿ, ಭಕ್ತಿಪೂರ್ವಕವಾಗಿ ಆಚರಿಸುವ ಸಂಬಂಧ, ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ ಸರ್ಕಾರದ ಆದೇಶ ಅನುಸರಿಸತಕ್ಕದ್ದು.ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಹಸಿರು ಪಟಾಕಿ ಸಿಡಿತ ಪ್ರಕ್ರಿಯೆಯು ನಿಗಧಿತ ಅವಧಿಯಲ್ಲಿ ನಡೆಯುವಂತೆ ನೋಡಿಕೊಳ್ಳುವುದು ಮತ್ತು ಕೋವಿಡ್-19ರ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಇತರೆ ಕಾನೂನುಗಳನುಸಾರ ಕಾನೂನು ಕ್ರಮ ಕೈಗೊಳ್ಳುವುದು.
ಸರ್ವೋಚ್ಚ ಆದೇಶ ಮತ್ತು ನಿರ್ದೆಶನಗಳನ್ನು ನೀಡಿದ್ದು, ಅದರಂತೆ ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ಮತ್ತು ಕೋವಿಡ್-19ರ ಹಿನ್ನಲೆಯಲ್ಲಿ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಸಾರ್ವಜನಿಕರು ಪಾಲಿಸಲು ಹಾಗೂ ಅಧಿಕೃತವಾಗಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಪರವಾನಗಿ ಪಡೆದ ಪರವಾನಿಗೆದಾರರ ಗಮನಕ್ಕೆ ಈ ಪ್ರಕಟಣೆಯ ಮೂಲಕ ತರಲಾಗಿದೆ.
ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ಪಟಾಕಿ ಸಿಡಿಸಿದ ನಂತರದ ಘನ ತ್ಯಾಜ್ಯ ವಸ್ತುಗಳಿಂದ ಮಾಲಿನ್ಯ ಉಂಟಾಗುವುದರಿಂದ ಸರಣಿ ಸ್ಪೋಟಕ ಪಟಾಕಿಗಳನ್ನು ತಯಾರಿಸುವುದು, ಮಾರಾಟ ಮಾಡುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಮಾನ್ಯ ಸರ್ವೊಚ್ಚ ನ್ಯಾಯಾಲಯವು ಮೇಲ್ಕಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಪರವಾನಗಿಯಲ್ಲಿ ನಿಗಧಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮತ್ತು ತಾತ್ಕಾಲಿಕ ಹಸಿರು ಪಟಾಕಿ ಅಂಗಡಿಗಳನ್ನು ತೆರೆಯಬೇಕು. ಬೇರೆ ಸ್ಥಳ ಮತ್ತು ದಿನಾಂಕಗಳಲ್ಲಿ ಅಂಗಡಿಯನ್ನು ತೆರೆಯಬಾರದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ