ದಾವಣಗೆರೆ: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದು, ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ಪ್ರದೇಶಗಳ ಘೋಷಿಸಬೇಕು. ರೈತರ ಪಂಪ್ ಸೆಟ್ ಗಳಿಗೆ ನಿರಂತರ ಏಳು ಗಂಟೆ ವಿದ್ಯುತ್ ಪೂರೈಸಬೇಕು. ಬ್ಯಾಂಕ್ ಗಳು ಸಾಲ ವಸೂಲಾತಿ ನಿಲ್ಲಿಸಬೇಕು ಹಾಗೂ ಕೃಷಿ ಕಾಯ್ದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಸೆ. 25 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.
ದಾವಣಗೆರೆ ಈ ಬಗ್ಗೆ ಮಾಹಿತಿ ನೀಡಿದ ಸಂಘದ ರಾಜ್ಯಾಧ್ಯಕ್ಷ ಹೆಚ್. ಆರ್. ಬಸವರಾಜಪ್ಪ, ಅಂದು ರೈತರು ಪ್ರತಿಭಟಿದಸಿ ಆಯಾ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವರು. ಈ ವರ್ಷ ತೀವ್ರ ಮಳೆ ಕೊರತೆ ಹಿನ್ನೆಲೆ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕರಾವಳಿ, ಮಲೆನಾಡು, ಅರೆ ಮಲೇನಾಡು, ಬಯಲು ಸೀಮೆಯಲ್ಲಿಯೂ ಮಳೆಯಾಗಿಲ್ಲ. ಸರ್ಕಾರ ಕೂಡಲೇ ಬರಗಾಲ ಘೋಷಿಸಿದರೆ ಕೇಂದ್ರ ಸರ್ಕಾರವು ಅಲ್ಪ ಸಹಾಯವನ್ನು ಮಾಡುತ್ತದೆ. ನಷ್ಟ ಅನುಭವಿಸಿದ ರೈತರಿಗೆ ಒಂದು ಎಕರೆಗೆ 25 ಸಾವಿರ ರೂಪಾಯಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಸರ್ಕಾರ ಏಳು ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಹೇಳಿತ್ತು. ಈಗ ನಾಲ್ಕು ಗಂಟೆಯೂ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ನಿರಂತರವಾಗಿ ವಿದ್ಯುಚ್ಛಕ್ತಿ ನೀಡಿದರೆ ರೈತರಿಗೆ ಅನುಕೂಲವಾಗುತ್ತದೆ. ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಈ ನಿರ್ಧಾರ ವಿರೋಧಿಸಿ ನಿರ್ಧಾರ ಕೈಗೊಳ್ಳಬೇಕು ಎಂದರು.
ಸಿಎಂ ಸಿದ್ದರಾಮಯ್ಯ ಸಾಲ ವಸೂಲಾತಿ ಮಾಡಬಾರದು ಎಂದು ಬ್ಯಾಂಕ್ ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ಬ್ಯಾಂಕ್ ಸಾಲ ವಸೂಲಾತಿಗೆ ರೈತರಿಗೆ ನೊಟೀಸ್ ನೀಡಿದ್ದಾರೆ. ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಇದರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.



