ದಾವಣಗೆರೆ: ಜಗಳೂರು ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಇದೇ ಏಪ್ರಿಲ್ ತಿಂಗಳ ಕೊನೆಯ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆಗಳು ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳು ಜಗಳೂರು ತಾಲ್ಲೂಕಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಚರ್ಚಿಸಲು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳು ತಮ್ಮ ಇಲಾಖೆ ವತಿಯಿಂದ ನೀಡಲಾಗುವ ಯೋಜನೆ, ಕಾರ್ಯಕ್ರಮಗಳ ವಿವರಗಳನ್ನು ಒಳಗೊಂಡ ಸ್ಟಾಲ್ ಗಳನ್ನು ಕಾರ್ಯಕ್ರಮ ಜರುಗುವ ಆವರಣದಲ್ಲಿ ಹಾಕಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಸಚಿವರು, ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಕಾರ್ಯಕ್ರಮ ಬಹಳ ಅಚ್ಚುಕಟ್ಟಿನಿಂದ ಕೂಡಿರಬೇಕು ಅಂದು ಮುಖ್ಯಮಂತ್ರಿಗಳು ಜಗಳೂರು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಚಾಲನೆ ನೀಡಲಿದ್ದಾರೆ.
ಪ್ರಮುಖವಾಗಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಜಗಳೂರು ತಾಲ್ಲೂಕಿನ 57 ಕೆರೆಗಳನ್ನು ತುಂಬಿಸುವ 1255 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಹಾಗೂ 26 ಕೋಟಿ ರೂ. ವೆಚ್ಚದಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯ ನಿವೇಶನಗಳ ಅಭಿವೃದ್ದಿಗೆ ಶಂಕುಸ್ಥಾಪನೆ, 3 ಕೋಟಿ ರೂ. ವೆಚ್ಚದಲ್ಲಿ ನೂತನ ಪಟ್ಟಣ ಪಂಚಾಯಿತಿ ಕಟ್ಟಡದ ಲೋಕಾರ್ಪಣೆ, ಕೃಷಿ ಇಲಾಖೆಯ 5,340 ಹೆಕ್ಟೇರ್ ಭೂಮಿಗೆ ನೀರೊದಗಿಸುವ ಕೃಷಿ ಸಿಂಚಾಯಿ ಯೋಜನೆಯ ಜಲಾನಯನ ಅಭಿವೃದ್ದಿ ಕಾಮಗಾರಿ ಲೋಕಾರ್ಪಣೆ, 2 ಕೋಟಿ ರೂ. ವೆಚ್ಚದ ವಿ.ಐ.ಪಿ ಗೆಸ್ಟ್‍ಹೌಸ್ ಲೋಕಾರ್ಪಣೆ, ಜಂಗಮ ತುಂಬಿಗೆರೆಯ 1.5 ಕೋಟಿ ರೂ. ವೆಚ್ಚದ ಚೆಕ್ ಡ್ಯಾಂ ಸೇರಿದಂತೆ ಹಲವಾರು ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ವಿವಿಧ ಇಲಾಖೆಗಳಿಂದ ಸವಲತ್ತುಗಳನ್ನು ಪಡೆದಿರುವ ಫಲಾನುಭವಿಗಳಿಗೆ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ 14 ಹಕ್ಕುಪತ್ರ, ರೇಷ್ಮೆ ಇಲಾಖೆಯಿಂದ 3 ರೈತರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ, ಮೀನುಗಾರಿಕೆ ಇಲಾಖೆಯಿಂದ 7 ಜನರಿಗೆ ಸಹಾಯಧನ ಸೌಲಭ್ಯ, ಕೋವಿಡ್ ಪರಿಹಾರ ಆದೇಶ ಪತ್ರ, ವಾಲ್ಮೀಕಿ ಅಭಿವೃದ್ದಿ ನಿಗಮದಿಂದ ಫಲಾನುಭವಿಗಳಿಗೆ ನೇರಸಾಲ ಸೌಲಭ್ಯ ಒದಗಿಸುವ ಆದೇಶ ಪತ್ರಗಳನ್ನು ವಿತರಿಸಲಾಗುವುದು. ಸಂಬಂಧಿಸಿದ ಇಲಾಖೆಗಳು ತಮ್ಮ ತಮ್ಮ ಇಲಾಖೆಗಳ ಶಿಲಾನ್ಯಾಸ ಫಲಕಗಳನ್ನು ಶಿಷ್ಟಾಚಾರದಂತೆ ತಯಾರಿಸಿಕೊಂಡು, ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಜೋಡಿಸಬೇಕು ಎಂದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಉದ್ಘಾಟನೆ ಶಂಕುಸ್ಥಾಪನೆಗೆ ಸಿದ್ಧವಿರುವ ಮತ್ತು ಆಯಾ ಇಲಾಖೆಯಿಂದ ನೀಡುವ ಪರಿಹಾರ ಹಾಗೂ ಸಹಾಯಧನಗಳ ಕುರಿತು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಚನ್ನಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ, ಹೊನ್ನಾಳಿ ವಿಭಾಗದ ಉಪ ವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ಜಗಳೂರು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.