ದಾವಣಗೆರೆ: ಜಗಳೂರು ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಏಪ್ರಿಲ್ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ.
ಜಗಳೂರಿಗೆ ಸಿಎಂ ಆಗಮನ ಹಿನ್ನೆಲೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆಗಳು ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಶುಕ್ರವಾರ ಜಗಳೂರು ತಾಲ್ಲೂಕಿನ ಗುರುಸಿದ್ದಾಪುರ (ಮಡ್ರಳ್ಳಿ) ಗ್ರಾಮದ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ವಿವಿಧ ಇಲಾಖೆಗಳ ಸಚಿವರು, ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಕಾರ್ಯಕ್ರಮ ಬಹಳ ಅಚ್ಚುಕಟ್ಟಿನಿಂದ ಕೂಡಿರಬೇಕು. ಅಂದು ಮುಖ್ಯಮಂತ್ರಿಗಳು ಜಗಳೂರು ತಾಲ್ಲೂಕಿನ ಸಮಗ್ರ ಅಭಿವೃದ್ದಿಗೆ ಪ್ರಮುಖವಾಗಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಜಗಳೂರು ಭದ್ರಾ ಮೇಲ್ದಂಡೆ ಯೋಜನೆಯ 1255 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.
26 ಕೋಟಿ ರೂ. ವೆಚ್ಚದಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯ ನಿವೇಶನಗಳ ಅಭಿವೃದ್ದಿಗೆ ಶಂಕುಸ್ಥಾಪನೆ, 3 ಕೋಟಿ ರೂ. ವೆಚ್ಚದಲ್ಲಿ ನೂತನ ಪಟ್ಟಣ ಪಂಚಾಯಿತಿ ಕಟ್ಟಡದ ಲೋಕಾರ್ಪಣೆ, ಕೃಷಿ ಇಲಾಖೆಯ 5,340 ಹೆಕ್ಟೇರ್ ಭೂಮಿಗೆ ನೀರೊದಗಿಸುವ ಕೃಷಿ ಸಿಂಚಾಯಿ ಯೋಜನೆಯ ಜಲಾನಯನ ಅಭಿವೃದ್ದಿ ಕಾಮಗಾರಿ ಲೋಕಾರ್ಪಣೆ, 2 ಕೋಟಿ ರೂ. ವೆಚ್ಚದ ವಿ.ಐ.ಪಿ ಅತಿಥಿ ಗೃಹ ಲೋಕಾರ್ಪಣೆ, ಅಣಬೂರು ಹಾಗೂ ಜಂಗಮ ತುಂಬಿಗೆರೆಯ ತಲಾ 1 ಕೋಟಿ ರೂ. ವೆಚ್ಚದ ಚೆಕ್ ಡ್ಯಾಂ ಸೇರಿದಂತೆ ಹಲವಾರು ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.
ವಿವಿಧ ಇಲಾಖೆಗಳಿಂದ ಸವಲತ್ತುಗಳನ್ನು ಪಡೆದಿರುವ ಫಲಾನುಭವಿಗಳಿಗೆ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ 14 ಹಕ್ಕುಪತ್ರ, ರೇಷ್ಮೆ ಇಲಾಖೆಯಿಂದ 3 ರೈತರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ, ಮೀನುಗಾರಿಕೆ ಇಲಾಖೆಯಿಂದ 7 ಜನರಿಗೆ ಸಹಾಯಧನ ಸೌಲಭ್ಯ, ಕೋವಿಡ್ ಪರಿಹಾರ ಆದೇಶ ಪತ್ರ, ವಾಲ್ಮೀಕಿ ಅಭಿವೃದ್ದಿ ನಿಗಮದಿಂದ ಫಲಾನುಭವಿಗಳಿಗೆ ನೇರಸಾಲ ಸೌಲಭ್ಯ ಒದಗಿಸುವ ಆದೇಶ ಪತ್ರಗಳನ್ನು ವಿತರಿಸಲಾಗುವುದು ಎಂದರು.
ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ ರಾಮಚಂದ್ರ ಮಾತನಾಡಿ ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ನೆರವೇರಿಸಲಿದ್ದಾರೆ ಎಂದರು.
ಸುಮಾರು 20 ಸಾವಿರ ಜನರ ಸಮ್ಮುಖದಲ್ಲಿ ಮುಖ್ಯಮಂತ್ರಿಗಳು ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ದಿಗೆ ನೆರವಾಗುವ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಹಾಗೂ ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ. ಚನ್ನಪ್ಪ, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಲಕ್ಷ್ಮೀಪತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ಜಗಳೂರು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.