ದಾವಣಗೆರೆ: ಮಾರ್ಚ್ 1, 2ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಲಿದೆ.
ಈ ಬಗ್ಗೆ ಕಸಾಪ ಜಿಲ್ಲಾಧ್ಯಕ್ಷ ಡಾ.ಎಚ್.ಎಸ್. ಮಂಜುನಾಥ ಕುರ್ಕಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾ. 1ರಂದು ಬೆಳಿಗ್ಗೆ 8:30ಕ್ಕೆ ಜಿಪಂ ಅಧ್ಯಕ್ಷೆ ಕೆ.ವಿ. ಶಾಂತಕುಮಾರಿ ರಾಷ್ಟ್ರ ಧ್ವಜಾರೋಹಣ, ಕಸಾಪ ಜಿಲ್ಲಾಧ್ಯಕ್ಷರಾದ ತಾವು ಕಸಾಪ ಧ್ವಜಾರೋಹಣ ಹಾಗೂ ಮಹಾನಗರ ಪಾಲಿಕೆ ಮಹಾಪೌರರು ನಾಡ ಧ್ವಜಾರೋಹಣ ಮೂಲಕ ಚಾಲನೆ ನೀಡುವರು.ನಂತರ ಸಮ್ಮೇಳನಾಧ್ಯಕ್ಷರ ಮೆರವಣಿಗೆ ವಿದ್ಯಾನಗರ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಕುವೆಂಪು ಕನ್ನಡ ಭವನವರೆಗೆ ನಡೆಯಲಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮೆರವಣಿಗೆಗೆ ಚಾಲನೆ ನೀಲಡಿದ್ದು, ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಲಿವೆ.ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ಪುಸ್ತಕ ಮಳಿಗೆ ಉದ್ಘಾಟಿಸುವರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಕೆ. ಲಿಂಗರಾಜ್ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡುವರು.
ಮಾ. 1ರಂದು ಬೆಳಗ್ಗೆ 11ಗಂಟೆಗೆ ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ಸಮ್ಮೇಳನ ಉದ್ಘಾಟಿಸುವರು. ಶಾಸಕ ಎಸ್.ಎ. ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು.ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರು ಡಾ. ಜಿ.ಎಸ್. ಶಿವರುದ್ರಪ್ಪ ವೇದಿಕೆ ಉದ್ಘಾಟಿಸುವರು. ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಶಾಮನೂರು ಶಿವಶಂಕರಪ್ಪ ಕೃತಿ ಬಿಡುಗಡೆಗೊಳಿಸುವರು. ಸಮ್ಮೇಳನಾಧ್ಯಕ್ಷ ಎನ್.ಟಿ. ಎರ್ರಿಸ್ವಾಮಿ ಅವರಿಗೆ ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ. ಲೋಕೇಶ ಅಗಸನಕಟ್ಟೆ ಕನ್ನಡ ಧ್ವಜ ಹಸ್ತಾಂತರಿಸುವರು. ನಂತರ ವಿವಿಧ ಗೋಷ್ಠಿಗಳು ನಡೆಯಲಿವೆ.



